ಮಂಗಳೂರು(ಮಂಡ್ಯ): ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ಬಿಸಿಲಿನ ಬೇಗೆಗೆ ಜನರು ಕಂಗಾಲಾಗಿದ್ದಾರೆ. ಈ ನಡುವೆ ಮೋಡ ಬಿತ್ತನೆ ಮಾತು ಕೇಳಿಬರುತ್ತಿದ್ದು, ಕೃಷಿ ಖಾತೆ ಸಚಿವ ಎನ್. ಚಲುವರಾಯಸ್ವಾಮಿ, ಮೋಡಬಿತ್ತನೆ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಈ ಹಿಂದೆ ಮೋಡ ಬಿತ್ತನೆ ಮಾಡಿದಾಗ ಸೂಕ್ತ ಪ್ರತಿಫಲ ಸಿಕ್ಕಿಲ್ಲ. ಆಗಸ್ಟ್ 30ರೊಳಗೆ ಹಳ್ಳಿಗಳನ್ನು ವೀಕ್ಷಣೆ ಮಾಡಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇವೆ. ಸೆಪ್ಟೆಂಬರ್ 4ರೊಳಗೆ ಬರ ಘೋಷಣೆ ಬಗ್ಗೆ ತೀರ್ಮಾನ ಮಾಡಿ, ಸೆಪ್ಟೆಂಬರ್ ಮೊದಲ ವಾರದಲ್ಲಿ ಬರಗಾಲ ಘೋಷಣೆ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬರದ ಛಾಯೆ ಇರುವ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯ ಸಭೆ ಒಂದೆರಡು ದಿನದಲ್ಲಿ ನಡೆಯಲಿದ್ದು, ಸಭೆಯಲ್ಲಿ ತೀರ್ಮಾನ ಮಾಡಿ ಬಳಿಕ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.