ಮಂಗಳೂರು(ಶಿವಮೊಗ್ಗ): ಬೆಂಗಳೂರಿನಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಗುರುವಾರದಿಂದ ನಾಗರಿಕ ವಿಮಾನಯಾನ ಸೇವೆ ಆರಂಭಗೊಂಡಿದ್ದು ಬೆಂಗಳೂರಿನಿಂದ ಇಂಡಿಗೋ ವಿಮಾನ ಬೆಳಗ್ಗೆ 9.50ಕ್ಕೆ ಮೊದಲ ಪ್ರಯಾಣ ಆರಂಭಿಸಿತು. ಬೆಳಗ್ಗೆ 9.50ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು 10:45ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ.
ಮೊದಲ ವಿಮಾನದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಶಾಸಕರಾದ ಆರಗ ಜ್ಞಾನೇಂದ್ರ, ವಿಜಯೇಂದ್ರ, ಬೇಳೂರು ಗೋಪಾಲಕೃಷ್ಣ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಪ್ರಯಾಣ ಬೆಳೆಸಿದ್ದಾರೆ. ಇದು ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು, ಇದಕ್ಕೆ 450 ಕೋಟಿ ರೂ. ವಿನಿಯೋಗಿಸಲಾಗಿದೆ. ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ಏರ್‍ಪೋರ್ಟ್ ಮೈದಾಳಿದ್ದು, ಇದರಲ್ಲಿ ಏರ್‍ಬಸ್ ಮಾದರಿಯ ವಿಮಾನಗಳೂ ಬಂದಿಳಿಯುವ ಅನುಕೂಲಗಳನ್ನು ಕಲ್ಪಿಸಲಾಗಿದೆ. ಇದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.
ಇಂಡಿಗೋ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರತಿದಿನ ಬೆಳಿಗ್ಗೆ 11.25ಕ್ಕೆ ಹೊರಟು 12.25ಕ್ಕೆ ಬೆಂಗಳೂರನ್ನು ತಲುಪಲಿದೆ. ಅಲ್ಲಿಂದ ಚೆನ್ನೈ, ಮುಂಬೈ ಮತ್ತು ದೆಹಲಿಗೆ ಹೊರಡಲಿರುವ ಇಂಡಿಗೋ ವಿಮಾನಗಳನ್ನು ಹಿಡಿಯಬಹುದು. ಈ ಸೇವೆಯು ಸೆ.10ರಿಂದ ಲಭ್ಯವಾಗಲಿದೆ. ಇದೇ ರೀತಿಯಲ್ಲಿ ಬೆಂಗಳೂರಿನ ಕಡೆಯಿಂದ ಇದೇ ವಿಮಾನವು ಪ್ರತಿದಿನ ಬೆಳಿಗ್ಗೆ 9.55ಕ್ಕೆ ಹೊರಟು 11.05ಕ್ಕೆ ಶಿವಮೊಗ್ಗದಲ್ಲಿ ಇಳಿಯಲಿದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.
ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
The first Indigo flight to arrive at the Shivamogga Airport.
welcomed through a water salute… pic.twitter.com/WTq7E9E5DA— M B Patil (@MBPatil) August 31, 2023