ಮಂಗಳೂರು: 2024ರ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮತ್ತು ಜನತಾ ದಳ ಕೈ ಜೋಡಿಸಲು ಒಪ್ಪಿಕೊಂಡಿದೆ. ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಇತ್ತೀಚಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿ ಕುರಿತು ಮಾತುಕತೆ ನಡೆಸಿದ್ದರು. ಮೈತ್ರಿಗೆ ಒಪ್ಪಿಗೆ ಸೂಚಿಸಿರುವ ಅಮಿತ್ ಶಾ ಮುಂದುವರಿಯುವಂತೆ ರಾಜ್ಯದ ನಾಯಕರಿಗೆ ಸೂಚನೆ ನೀಡಿದ್ದಾರೆ. ಅದರಂತೇ ಕರ್ನಾಟಕದಲ್ಲಿ 4 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಡಲಿದೆ.
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಖಚಿತವಾಗಿದ್ದು ಜೆಡಿಎಸ್ ಜತೆಗಿನ ಮೈತ್ರಿ ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಮಾತುಕತೆ ವೇಳೆ ದೇವೇಗೌಡರು ಹಾಸನ, ಮಂಡ್ಯ, ಚಿಕ್ಕಬಲ್ಲಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬೇಡಿಕೆ ಇಟ್ಟಿದ್ದರು. ಅಮಿತ್ ಶಾ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಡಲು ಒಪ್ಪಪಿಗೆ ಸೂಚಿಸಿದ್ದಾರೆ. ಆದರೆ ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.