ಮಂಗಳೂರು(ಬೆಂಗಳೂರು): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್ ಮೈತ್ರಿ ಕುರಿತು ಮಾತನಾಡಿರುವುದು ಅವರ ವೈಯಕ್ತಿಕ ಪ್ರತಿಕ್ರಿಯೆಯಾಗಿದೆ. ಆದರೆ, ಇದುವರೆಗೆ ಸೀಟು ಹಂಚಿಕೆ ಅಥವಾ ಯಾವುದರ ಬಗ್ಗೆಯೂ ಚರ್ಚೆ ನಡೆದಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಎರಡು ಪಕ್ಷದ ನಾಯಕರು ಸೌಹಾರ್ದಯುತವಾಗಿ ಹಲವು ಬಾರಿ ಭೇಟಿ ಮಾಡಿದ್ದೇವೆ. ಮೈತ್ರಿಗೆ ಸಂಬಂಧಿಸಿ ಚರ್ಚೆ ನಡೆಸುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಮಾಡುತ್ತಿರುವುದರಿಂದ ಜನರಿಗೆ ಪರ್ಯಾಯ ಆಯ್ಕೆಗಳು ಬೇಕಿದೆ. 2006ರಲ್ಲಿ ನಾನು ಬಿಜೆಪಿಯೊಂದಿಗೆ ಕೈಜೋಡಿಸಿದ್ದೆ. 20 ತಿಂಗಳ ಉತ್ತಮ ಆಡಳಿತ ನಡೆಸಿದ್ದೆ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಬಿಜೆಪಿ– ಜೆಡಿಎಸ್ ನಿರ್ಧರಿಸಿದ್ದು, ಕೆಲವೇ ದಿನಗಳಲ್ಲಿ ಸೀಟು ಹಂಚಿಕೆ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ. ಎರಡೂ ಪಕ್ಷಗಳ ವರಿಷ್ಠರ ಹಂತದಲ್ಲೇ ಮೈತ್ರಿಯ ನಿರ್ಧಾರ ಅಂತಿಮಗೊಂಡಿದೆ.
ಜೆಡಿಎಸ್ ನಾಯಕರು ಮೈತ್ರಿ ವಿಚಾರವನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಆದರೆ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಆ ಪಕ್ಷದ ಕೆಲವು ಮುಖಂಡರು ಜೆಡಿಎಸ್ ಜತೆಗಿನ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಉಭಯ ಪಕ್ಷಗಳ ಮಧ್ಯೆ ಮೈತ್ರಿಯ ಕುರಿತು ಚರ್ಚೆ ಆರಂಭವಾಗಿತ್ತು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ದೆಹಲಿಗೆ ತೆರಳಿ ಬಿಜೆಪಿ ವರಿಷ್ಠರ ಜತೆ ಚರ್ಚಿಸಿದ್ದರು.