ತಮಿಳುನಾಡಿಗೆ ಕಾವೇರಿ ನೀರು – ಸರ್ವಪಕ್ಷಗಳ ಸಭೆ – ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಸು.ಕೋರ್ಟ್‌ ಗೆ ಅರ್ಜಿ ಸಲ್ಲಿಸಲು ನಿರ್ಧಾರ

ಮಂಗಳೂರು(ಬೆಂಗಳೂರು): ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗುವುದು. ಅಲ್ಲಿಯೂ ವಾಸ್ತವಾಂಶ ತಿಳಿಸುವ ಕೆಲಸ ಮಾಡಲಾಗುವುದು. ಈಗ 5,000 ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡುವ ಬಗ್ಗೆ ಹಾಗೂ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧ ನಡೆದ ಸರ್ವ ಪಕ್ಷ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸರ್ವಪಕ್ಷ ನಿಯೋಗ ತೆರಳಲು ಅನುವು ಮಾಡಿಕೊಡುವಂತೆ ಪ್ರಧಾನಮಂತ್ರಿಯವರ ಸಮಯ ಕೇಳಿ ಮತ್ತೊಮ್ಮೆ ಪತ್ರ ಬರೆಯಲಾಗುವುದು. ಸಂಸದರೂ ಹೋರಾಟ ಮಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದ್ದರು.18 ರಿಂದ ಸಂಸತ್‌ ಅಧಿವೇಶನ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿ ಚರ್ಚಿಸಿ, ದೇಶದ ಗಮನ ಸೆಳೆಯಲಾಗುವುದು. ಇದಕ್ಕೆ ಎಲ್ಲರೂ ಸಹಮತಿ ಸೂಚಿಸಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶ ಪ್ರಕಾರ ಸಾಮಾನ್ಯ ವರ್ಷಗಳಲ್ಲಿ 177.25 ಟಿಎಂಸಿ ನೀರು ಬಿಡಬೇಕು. ಆದರೆ ದುರದೃಷ್ಟವಶಾತ್‌ ಸಂಕಷ್ಟ ಹಂಚಿಕೆ ಸೂತ್ರವಿಲ್ಲದ ಕಾರಣ ಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದೇವೆ. 99 ಟಿಎಂಸಿ ನೀರು ಕೊಡಬೇಕಾಗಿತ್ತು. ಇವತ್ತಿನ ವರೆಗೆ 37.7 ಟಿಎಂಸಿ ನೀರು ಬಿಡಲಾಗಿದೆ. ಈಗಲೂ ನೀರು ಬಿಡಲಾಗದೆ ಇರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ಉಳಿಸಿಕೊಳ್ಳಲು ಬೇಕು. 33 ಟಿಎಂಸಿ ಕುಡಿಯುವ ನೀರಿಗಾಗಿ ಬೇಕು. ಜೊತೆಗೆ 3 ಟಿಎಂಸಿ ಕೈಗಾರಿಕೆಗಳಿಗೆ ಬೇಕು. ಇದೀಗ ಲಭ್ಯವಿರುವುದು ನಾಲ್ಕೂ ಜಲಾಶಯಗಳಿಂದ 53 ಟಿಎಂಸಿ ನೀರು ಮಾತ್ರ. ಬೆಳೆಗಳಿಗೆ ಕಟ್ಟುನೀರು ಬಿಡಲಾಗುತ್ತಿದೆ. ಇದರಲ್ಲಿ ನಾವು 33 ಟಿಎಂಸಿ ಕುಡಿಯುವ ನೀರಿಗೆ ಹಾಗೂ 3 ಟಿಎಂಸಿ ಕೈಗಾರಿಕೆಗಳಿಗೆ ಒದಗಿಸಬೇಕಾಗುತ್ತದೆ. ಬೆಳೆಗಳಿಗೆ ಸಾಕಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾವೇರಿ ನೀರು ನಿಯಂತ್ರಣ ಸಮಿತಿಯು 10 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ನೀಡಿತ್ತು. ಮತ್ತೆ ನಿನ್ನೆ ಐದು ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿದ್ದ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಲಾಗಿತ್ತು. ತುರ್ತಾಗಿ ಆಯೋಜನೆಯಾದ ಈ ಸಭೆಗೆ ಪೂರ್ವನಿರ್ಧಾರಿತ ಕಾರ್ಯಕ್ರಮಗಳ ಕಾರಣ ಬಿಎಸ್ ವೈ, ಬಸವರಾಜ ಬೊಮ್ಮಾಯಿ ಮತ್ತು ಕುಮಾರಸ್ವಾಮಿ ಗೈರಾಗಿದ್ದರು.

LEAVE A REPLY

Please enter your comment!
Please enter your name here