ಮಂಗಳೂರು (ಮಂಡ್ಯ): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಹಿತರಕ್ಷಣಾ ಸಮಿತಿ ಶನಿವಾರ ಕರೆ ನೀಡಿದ್ದ ಮಂಡ್ಯ, ಮದ್ದೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ನಗರ ಹಾಗೂ ಮದ್ದೂರು ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿದ್ದು ವಾಣಿಜ್ಯ ಚಟುವಟಿಕೆ ಸಂಪೂರ್ಣ ಸ್ತಬ್ಧಗೊಂಡಿದೆ. ಆಟೋ, ಖಾಸಗಿ, ಸಾರಿಗೆ ಸಂಸ್ಥೆ ಬಸ್ ಗಳು ರಸ್ತೆಗೆ ಇಳಿದಿಲ್ಲ. ಶಾಲಾ ಕಾಲೇಜು, ಚಿತ್ರಮಂದಿರಗಳು ಬಂದ್ ಆಗಿವೆ. ನಗರದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿವೆ. ವಾಹನ ಸಂಚಾರಕ್ಕೆ ಬದಲಿ ಮಾರ್ಗ ಕಲ್ಪಿಸಲಾಗಿದೆ. ವಿವಿಧ ಸಂಘಟನೆಗಳ ಸದಸ್ಯರು ಬೈಕ್ ರ‍್ಯಾಲಿ ನಡೆಸಿ ಕಾವೇರಿ ಜಾಗೃತಿ ಕರಪತ್ರ ಹಂಚಿದರು. ಜೆ.ಸಿ ವೃತ್ತದಲ್ಲಿ ರೈತ ಮುಖಂಡರು ರಸ್ತೆಯಲ್ಲಿ ಮಲಗಿ ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ತಮಿಳುನಾಡಿನ ಹರಿಯುತ್ತಿರುವ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಇನ್ನೊಂದೆಡೆ ತಮಿಳುನಾಡಿಗೆ ಕಾವೇರಿ ನದಿಯಿಂದ ನೀರು ಹರಿಸುವ ವಿಚಾರದಲ್ಲಿ ಸೆ.26ರ ವರೆಗೆ ಸುಪ್ರಿಂ ಕೋರ್ಟ್ ಆದೇಶ ಪಾಲಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ನ್ಯಾಯಾಲಯದ ಆದೇಶವನ್ನೂ ಪಾಲಿಸಿ, ರಾಜ್ಯದ ರೈತರ ಹಿತ ರಕ್ಷಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.