ಕರ್ನಾಟಕ ನಾಮಕರಣಕ್ಕೆ 50 ವರ್ಷ-ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ-ವರ್ಷವಿಡೀ ಕರ್ನಾಟಕ ಸಂಭ್ರಮ ಆಚರಣೆ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಂಗಳೂರು(ಬೆಂಗಳೂರು): ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಪ್ರಸಕ್ತ ಸಾಲಿನ ನ.1 ರಿಂದ 2024ರ ನ.1ರ ವರೆಗೆ ಕರ್ನಾಟಕ ಸಂಭ್ರಮ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಕರ್ನಾಟಕ ಸಂಭ್ರಮ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸುವ ಕುರಿತು ಚರ್ಚಿಸಲು ಅ.4ರಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ದೇಶಿ ಕ್ರೀಡೆಗಳನ್ನು ಹಮ್ಮಿಕೊಳ್ಳುವುದು, ಕರ್ನಾಟಕದ ದೇಶಿ ಸಂಸ್ಕೃತಿ ಹೆಚ್ವು ಬಿಂಬಿಸಬೇಕು, ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೂ ದಾಟಿಸುವ ರೀತಿ ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಸೂಚಿಸಿದ್ದಾರೆ. ನಾಡಿನ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಸ್ಮಾರಕ ಅಭಿವೃದ್ಧಿ, ಜೀರ್ಣೋದ್ಧಾರ: ವಿಧಾನಸೌಧ ಹಾಗೂ ಶಾಸಕರ ಭವನದ ಮಧ್ಯೆ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸುವುದು, ಮೈಸೂರಿನಲ್ಲಿ ದೇವರಾಜ ಅರಸರ ಪ್ರತಿಮೆ ಸ್ಥಾಪನೆ, ಧಾರವಾಡದ ಅದರಗುಂಚಿ ಶಂಕರಗೌಡ, ಬಳ್ಳಾರಿಯ ಹುತಾತ್ಮ ರಂಜಾನ್ ಸಾಬ್ ಹಾಗೂ ಗದಗ ಜಿಲ್ಲೆಯ ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯ ಹಮ್ಮಿಕೊಳ್ಳುವುದು ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳನ್ನು ರೂಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ: ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ, ಲೇಸರ್ ಶೋ/ಧ್ವನಿ, ಬೆಳಕು ಕಾರ್ಯಕ್ರಮ, ಕರ್ನಾಟಕಕ್ಕೆ ಕೊಡುಗೆ ನೀಡಿದ 50 ಮಹಿಳೆಯರಿಗೆ ಪ್ರಶಸ್ತಿ ನೀಡುವುದು ಹಾಗೂ 2024ರ ನವೆಂಬರ್ ನಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.

ಕರ್ನಾಟಕ ಸಂಭ್ರಮ-50 ಕಾರ್ಯಕ್ರಮದ ಲಾಂಛನವನ್ನು ಅ.17ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಸಚಿವ ಭೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಕಂದಾಯ ಇಲಾಖೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಕರ್ನಾಟಕ ಎಂದು ನಾಮಕರಣಗೊಂಡ 50ನೆ ವರ್ಷವನ್ನು 2022ರ ನ.1 ರಿಂದ 2023ರ ನ.1ರ ವರೆಗೆ ಹಿಂದಿನ ಸರಕಾರ ವೈಭವದಿಂದ ಆಚರಿಸಬೇಕಿತ್ತು. ಹಿಂದಿನ ಸರಕಾರ ಏಕೆ ಆಚರಿಸಲಿಲ್ಲ? ಈ ನಿರ್ಲಕ್ಷ್ಯ ಸರಿನಾ? ಈಗ 50 ವರ್ಷ ತುಂಬಿ 51ನೆ ವರ್ಷಕ್ಕೆ ಕಾಲಿಡಲಿಡುತ್ತಿದ್ದೇವೆ. 50 ವರ್ಷ ತುಂಬಿದ ನಂತರ ಸಂಭ್ರಮ ಆಚರಿಸಿದರೆ ಮಹತ್ವವಿರುತ್ತದೆಯೆ? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ, ಪ್ರಸಕ್ತ ಸಾಲಿನ ನ.1 ರಿಂದ 2024ರ ನ.1ರ ವರೆಗೆ ಅರ್ಥಪೂರ್ಣವಾಗಿ ಆಚರಿಸಿ ಎಂದು ಸೂಚನೆ ನೀಡಿದರು.

LEAVE A REPLY

Please enter your comment!
Please enter your name here