ಮಂಗಳೂರು(ಮಂಡ್ಯ): ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡ ದುರಂತ ಮಾಸುವ ಮುನ್ನವೇ ಮಂಡ್ಯದ ಮನ್ ಮುಲ್ನಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದೆ.
ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಮೆಗಾ ಡೈರಿ ಘಟಕ ಕಳೆದ ಐದು ತಿಂಗಳ ಹಿಂದೆ ಉದ್ಘಾಟನೆಯಾಗಿತ್ತು. ಎಂದಿನಂತೆ ಕಾರ್ಮಿಕರು ಭಾನುವಾರ ಬೆಳಗ್ಗಿನ ಶಿಫ್ಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಶಾರ್ಟ್ ಸರ್ಕ್ಯೂಟ್‌ನಿಂದ ಮನ್ ಮುಲ್‌ನ ಪ್ಯಾಕಿಂಗ್ ಸೆಕ್ಷನ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿ ಕಟ್ಟಡದಿಂದ ಹೊರಕ್ಕೆ ಓಡಿಬಂದಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದರೂ ತುಪ್ಪದ ಘಟಕಕ್ಕೆ ಬೆಂಕಿ ತಗುಲಿರುವುದರಿಂದ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಆದರೆ, ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.