ಮಂಗಳೂರು: ಐಟಿ ದಾಳಿ ವೇಳೆ ಕಾಂಗ್ರೆಸ್ ಕಮಿಷನ್ ವ್ಯವಹಾರ ಬಹಿರಂಗವಾಗಿದೆ. ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೈಜ ಬಣ್ಣ ಬಯಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರ ಕಮಿಷನ್ ಧಂದೆ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಮಿನಿ ವಿಧಾನಸೌಧ ಎದುರು ಅ.16ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಶೇ.40 ಕಮಿಷನ್ ಆರೋಪ ಮಾಡಿತ್ತು. ಈ ಬಗ್ಗೆ ಯಾವುದೇ ದಾಖಲೆ ನೀಡಿರಲಿಲ್ಲ. ಇದೇ ಕಾರಣಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಜೈಲಿಗೆ ಹೋಗಿದ್ದರು. ನಾವು ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಕಮಿಷನ್ ಧಂದೆಯಲ್ಲಿ ತೊಡಗಿಕೊಂಡಿದೆ ಎಂದರು.
ಬಿಜೆಪಿ ಜಿಲ್ಲಾ ಘಟಕದ ಆಧ್ಯಕ್ಷ ಸುದರ್ಶನ ಎಂ. ಅವರು ಮಾತನಾಡಿ, ರಾಜ್ಯದಲ್ಲಿ ಭ್ರಷ್ಟಾಚಾರದ ಸರಕಾರ ಆಳ್ವಿಕೆ ನಡೆಸುತ್ತಿದೆ. ರಾಜ್ಯ ಸರಕಾರ ಕಾಂಗ್ರೆಸ್ ಪಕ್ಷದ ಎಟಿಎಂ ಆಗಿದೆ. ಐಟಿ ದಾಳಿಯಲ್ಲಿ ಕಾಂಗ್ರೆಸ್ ಪಕ್ಷದ ಆಪ್ತರ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ಕಮಿಷನ್ ಪಡೆಯುತ್ತಿರುವ ಸರಕಾರ ಇದೀಗ ಗುತ್ತಿಗೆದಾರರಿಗೆ ಬಿಲ್ ಮೊತ್ತ ಪಾವತಿಸಿ ಅವರಿಂದ ಕಮಿಷನ್ ಪಡೆದಿದೆ ಎಂದು ಆರೋಪಿಸಿದರು.