ಮಂಗಳೂರು: ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಈ ಹಿಂದೆ ಹಲವು ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತೌಡುಗೋಳಿ ನರಿಂಗಾನ ಉಳ್ಳಾಲದ ನಿವಾಸಿ ಅಬ್ದುಲ್ ಅಜೀಜ್ ಎಂಬಾತ ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತನಿಂದ ಒಟ್ಟು 26 ಗ್ರಾಂ ತೂಕದ ರೂ. 1,30,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾದಕ ವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಗಳು-2, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 6,41,500/-ಆಗಬಹುದು. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ.