ಮಂಗಳೂರು (ಚಿಕ್ಕಬಳ್ಳಾಪುರ): ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಿಂದ ಹರಡುವ ಮಾರಕ ಝೀಕಾ ವೈರಸ್ ಪತ್ತೆಯಾಗಿದೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ವ್ಯಾಪ್ತಿಯಲ್ಲಿ ಝೀಕಾ ವೈರಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಆರೋಗ್ಯ ಇಲಾಖೆಯ ಅಧಿಕಾರಿಗಳು ಸೊಳ್ಳೆಗಳನ್ನು ಹಿಡಿದು ಪರೀಕ್ಷೆಗೆ ಒಳಪಡಿಸಿದಾಗ ಝೀಕಾ ವೈರಸ್ ದೃಢಪಟ್ಟಿದೆ. ಆದರೆ ಜನರಿಗೆ ಹರಡಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಝೀಕಾ ವೈರಸ್ ಕಂಡುಬಂದಿರುವ ತಲಕಾಯಲಬೆಟ್ಟ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ತಂಡ ಬೀಡು ಬಿಟ್ಟು ಮನೆ ಮನೆ ಸಮೀಕ್ಷೆ, ರಕ್ತ ಸಂಗ್ರಹಕ್ಕೆ ಮುಂದಾಗಿದೆ. ಜೊತೆಗೆ ವೈರಸ್ ಹರದಡಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದೆ.