ಮಂಗಳೂರು(ಬೆಂಗಳೂರು): ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಗ್ರಾಮಾಂತರ ಜಿಲ್ಲೆಯ ಉಪನಿರ್ದೇಶಕಿ ಪ್ರತಿಮಾ(45) ದುಷ್ಕರ್ಮಿಗಳಿಂದ ಹತ್ಯೆಯಾದ ಮಹಿಳೆಯಾಗಿದ್ದಾರೆ. ಮೂಲತಃ ಶಿವಮೊಗ್ಗದವರಾಗಿರುವ ಪ್ರತಿಮಾ ಕಳೆದ 8 ವರ್ಷಗಳಿಂದ ಬೆಂಗಳೂರಿನ ದೊಡ್ಡಕಲ್ಲಸಂದ್ರದ ಅಪಾರ್ಟ್ ಮೆಂಟೊಂದರಲ್ಲಿ ವಾಸವಾಗಿದ್ದರು.
ನ.4ರ ರಾತ್ರಿ ಚಾಲಕ ಪ್ರತಿಮಾ ಅವರನ್ನು ಮನೆಗೆ ಬಿಟ್ಟು ಹೋಗಿದ್ದರು. ನ.5ರ ಬೆಳಿಗ್ಗೆ ಸಹೋದರ ಕರೆ ಮಾಡಿದಾಗ ಪ್ರತಿಮಾ ಕರೆ ಸ್ವೀಕರಿಸಿರಲಿಲ್ಲ. ಅನುಮಾನಗೊಂಡು ಮನೆಗೆ ಬಂದು ನೋಡಿದಾಗ ಕೊಲೆ ನಡೆದಿರುವುದು ತಿಳಿದಿದೆ. ದುಷ್ಕರ್ಮಿಗಳು ಚಾಕುವಿನಿಂದ ಪ್ರತಿಮಾ ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಪರಿಚಯಸ್ಥರೇ ಕೃತ್ಯವೆಸಗಿರುವ ಅನುಮಾನ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ತಿಳಿದುಬಂದಿಲ್ಲ. ಕೊಲೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಕೊಲೆಗಾರರ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ.