ಮಂಗಳೂರು(ಬೆಂಗಳೂರು): ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದೆ ಬೆಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದ್ದಾರೆ.
ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆಯಲ್ಲಿ ಕಂಬಳ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದ್ದು ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಕಾಶ್ ಶೆಟ್ಟಿ ಹೇಳಿದ್ದಾರೆ. ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದವು. ಕಂಬಳದಲ್ಲಿ ಭಾಗವಹಿಸಲು ಈಗಾಗಲೇ 150ಕ್ಕೂ ಅಧಿಕ ಕೋಣಗಳ ಮಾಲಿಕರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ನೋಂದಾಯಿತ ಎಲ್ಲಾ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಟ್ಟು ಹಾಸನ ಹಾಗೂ ನೆಲಮಂಗಲದಲ್ಲಿ ಸ್ವಾಗತಿಸಲು ಕಂಬಳ ಸಮಿತಿ ತೀರ್ಮಾನಿಸಿದೆ.
ಸಭೆಯಲ್ಲಿ ಬೆಂಗಳೂರು ಕಂಬಳ ನಮ್ಮ ಕಂಬಳ ಎಂಬ ಥೀಮ್ ಸಾಂಗ್ ಬಿಡುಗಡೆ ಮಾಡಲಾಯಿತು. ವಿ. ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ ಮತ್ತು ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಥೀಮ್ ಸಾಂಗ್ ಮೂಡಿ ಬಂದಿದೆ.