ಮಂಗಳೂರು(ಮಂಡ್ಯ): ತಾನು ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿರುವ ಹಿಂದೆ ಯಾವುದೇ ರಾಜಕೀಯ ಒತ್ತಡ ಇಲ್ಲ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಸ್ಪಷ್ಟಪಡಿಸಿದ್ದಾರೆ.
ಮದ್ದೂರು ತಾಲೂಕಿನಲ್ಲಿ ಬಿಜೆಪಿ ವತಿಯಿಂದ ಕೈಗೊಂಡಿರುವ ಬರ ಪರಿಸ್ಥಿತಿ ಅಧ್ಯಯನ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣಕ್ಕೆ ಪ್ರವೇಶಿಸಿದ 25 ವರ್ಷಕ್ಕೆ ಚುನಾವಣಾ ರಾಜಕೀಯದಿಂದ ದೂರ ಆಗಬೇಕೆಂದು ತೀರ್ಮಾನಿಸಿದ್ದೆ. ಆದರೆ, ಪಕ್ಷದ ಒತ್ತಡದ ಹಿನ್ನೆಲೆಯಲ್ಲಿ ಕಳೆದ ಬಾರಿ ಲೋಕಸಭೆಗೆ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ ಎಂದರು. ಮನುಷ್ಯನಿಗೆ ಕೆಲವು ಇತಿಮಿತಿ ಇರಬೇಕು. ಮೂವತ್ತು ವರ್ಷದಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ, ಕೇಂದ್ರ ಸಚಿವನಾಗಿ, ರಾಜ್ಯದ ಸಚಿವನಾಗಿ, ಮುಖ್ಯಮಂತ್ರಿಯಾಗಿ, ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೇನೆ. ಹೀಗೆ ಹಲವು ಸ್ಥಾನವನ್ನು ಪಕ್ಷ ದೊರಕಿಸಿಕೊಟ್ಟಿದೆ ಎಂದು ಅವರು ತಿಳಿಸಿದರು. ಬಿಜೆಪಿ ಪಕ್ಷದ ಬರ ಅಧ್ಯಯನ ಬಗ್ಗೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಕ್ಷೇಪ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೈಯಲ್ಲಿನ ಎಲ್ಲಾ ಬೆರಳು ಸಮನಾಗಿ ಇರುವುದಿಲ್ಲ. ಹಾಗಾಗಿ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ಅಗತ್ಯ ಇಲ್ಲ ಎಂದರು.
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿವಿ ಸದಾನಂದಗೌಡ ಅವರಿಗೆ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನ.8ರಂದು ಹೇಳಿದ್ದರು.