ಮಂಗಳೂರು: ನ.10ರಂದು ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಭಟ್ರಗುಡ್ಡೆ ಎಂಬಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಅಲೆಕಳ, ತೊಕ್ಕೋಟ್ಟು, ಪೆರ್ಮನ್ನೂರು ನಿವಾಸಿ ಆರೋಪಿ ಮೊಹಮ್ಮದ್ ಇರ್ಷಾದ್(28) ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 70 ಸಾವಿರ ರೂ ಮೌಲ್ಯದ 12 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿರುತ್ತಾರೆ.
ಇನ್ನೊಂದೆಡೆ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಬಜಾಲ್ ಪಡ್ಪು ಹೌಸ್, ಮಸೀದಿ ರಸ್ತೆ ನಿವಾಸಿ ಹಸೈನಾರ್ ಯಾನೆ ಅಚ್ಚು(32) ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತನಿಂದ 12 ಗ್ರಾಂ ತೂಕದ ರೂ. 60,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಈತನ ವಿರುದ್ದ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಹಲ್ಲೆ ಪ್ರಕರಣ ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 3 ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿ ಮತ್ತು ಮಾದಕ ವಸ್ತು ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ಕಾರ್ಯಾಚರಣೆ ನಡೆಸಿರುತ್ತಾರೆ.