ನೇಜಾರು ಕಗ್ಗೊಲೆ ಪ್ರಕರಣ – ಶಂಕಿತ ಆರೋಪಿ ಪ್ರವೀಣ್ ಮಹಾರಾಷ್ಟ್ರದಲ್ಲಿ ಪೊಲೀಸ್ ಸಿಬ್ಬಂದಿಯಾಗಿದ್ದ!

ಮಂಗಳೂರು (ಉಡುಪಿ): ನೇಜಾರುವಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪೊಲೀಸರು ವಶಕ್ಕೆ ಪಡೆದಿರುವ ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿ ಮೂರು ತಿಂಗಳ ಕಾಲ ಪೊಲೀಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿದ್ದನು ಎಂಬ ಮಾಹಿತಿ ಲಭ್ಯವಾಗಿದೆ.

ಮೂರು ತಿಂಗಳು ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿದ್ದ ಚೌಗಲೆ, ಮಂಗಳೂರಿನ ಏರ್ ಇಂಡಿಯಾ ಕಂಪೆನಿಯಲ್ಲಿ ಕೆಲಸ ಸಿಕ್ಕಿರುವ ಹಿನ್ನೆಲೆಯಲ್ಲಿ ಪೊಲೀಸ್ ವೃತ್ತಿಗೆ ರಾಜೀನಾಮೆ ನೀಡಿದ್ದನು ಎನ್ನಲಾಗಿದೆ. ಈತ ಮಂಗಳೂರಿನ ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರ್ಯೂನಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾನೆ. ಈತನಿಗೆ ಏರ್ ಇಂಡಿಯಾದಲ್ಲಿ ಗಗನಸಖಿಯಾಗಿ ಸೇರಿದ್ದ ಅಯ್ನಾಝ್ ಅವರ ಪರಿಚಯವಾಗಿತ್ತು ಎಂಬ ಮಾಹಿತಿ ಸಿಕ್ಕಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮಾಧ್ಯಮದ ಜೊತೆ ಮಾತನಾಡಿದ ಎಸ್ಪಿ, ನಮ್ಮ ಮಾಹಿತಿ ಪ್ರಕಾರ ಆತ ಸಿ.ಐ.ಎಸ್.ಎಫ್. ಹಾಗೂ ಸಿ.ಆರ್.ಪಿಎಫ್.ನಲ್ಲಿ ಕರ್ತವ್ಯ ನಿರ್ವಹಿಸುತ್ತಿರಲಿಲ್ಲ. ಆತ ಸಿವಿಲ್ ಪೊಲೀಸ್ ನಲ್ಲಿ ಕೆಲಸ ಮಾಡುತ್ತಿದ್ದನು ಎಂಬ ಮಾಹಿತಿ ದೊರೆತಿದೆ. ಈ ಬಗ್ಗೆ ನಾವು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದರು.

ಪ್ರಕರಣದ ವಿವರ:
ನ.12ರಂದು ಬೆಳಗ್ಗೆ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಹಸೀನಾ( 48), ಮಕ್ಕಳಾದ ಅಫ್ನಾನ್ (23), ಅಯ್ನಾಝ್ (20) ಮತ್ತು ಅಸೀಮ್ (14) ಎಂಬವರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಚೂರಿ ಇರಿತಕ್ಕೊಳಗಾಗಿದ್ದ ಮೃತ ಹಸೀನಾ ಅವರ ಅತ್ತೆ ಹಾಜಿರಾ ಹಂತಕನಿಂದ ತಪ್ಪಿಸಿಕೊಂಡು ಶೌಚಾಲಯದೊಳಗೆ ಅವಿತು ಜೀವ ಉಳಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here