ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಮಾರುತಿ ಆಲ್ಟೋ ಕಾರು ಸೇರಿದಂತೆ 4.95 ಲಕ್ಷ ರೂ.ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಳ್ಳಲಾಗಿದೆ.
ಆರೋಪಿಗಳು ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯಿಂದ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಖರೀದಿ ಮಾಡಿ ತಂದು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕಿನ ಮುಡಿಪು ಮೂಳೂರು ಎಂಬಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಕೊಲ್ನಾಡು ಬೊಲ್ಪಾದೆಯ ಅಬ್ದುಲ್ ರಹಿಮಾನ್(42 ವ) ಮತ್ತು ಬೆಳ್ತಂಗಡಿ ತಾಲೂಕಿನ ಇಳಂತಿಲಾ ಗ್ರಾಮದ ಜೋಗಿಬೆಟ್ಟು, ಅಡವಿನಬಾಗಿಲು ನಿವಾಸಿ ಮೊಹಮ್ಮದ್ ಜಿಯಾದ್ (22 ವ) ಎಂದು ಗುರುತಿಸಲಾಗಿದೆ.
ಆರೋಪಿಗಳ ಪೈಕಿ ಅಬ್ದುಲ್ ರಹಿಮಾನ್ ಎಂಬಾತನ ಮೇಲೆ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳವು ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಗಲಾಟೆ ಪ್ರಕರಣ, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ ಎಂಡಿಎಂಎ ಮಾರಾಟ ಪ್ರಕರಣಗಳು ದಾಖಲಾಗಿರುತ್ತವೆ.
ಮೊಹಮ್ಮದ್ ಜಿಯಾದ್ ಎಂಬಾತನ ಮೇಲೆ ಈ ಹಿಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಂಡಿಎಂಎ ಸೇವನೆ ಮಾಡಿದ ಪ್ರಕರಣ ದಾಖಲಾಗಿರುತ್ತದೆ.
ಈ ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಮಾನ್ಯ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಭಾಗವಹಿಸಿದ್ದರು.