ಮಂಗಳೂರು(ಬೆಳಗಾವಿ): ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅಷ್ಟೇ ಅಲ್ಲ ಅನೇಕರ ಸೋಲಿಗೆ ವಿಜಯೇಂದ್ರ ಹುನ್ನಾರ ನಡೆಸಿದ್ದರು. ಅವರಿಂದ ನಮ್ಮ ಸಮಾಜಕ್ಕೆ ಮೀಸಲಾತಿ ಹಾಗೂ ನ್ಯಾಯ ಸಿಗುವುದಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಈ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಶಾಸಕಾಂಗ ಸಭೆ ಬಗ್ಗೆ ನನಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ. ಉತ್ತರ ಕರ್ನಾಟಕ ಭಾಗದವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕ ಹುದ್ದೆ ಸಿಗುವವರೆಗೂ ನಾನು ಯಾವುದೇ ಸಭೆಗೆ ಹೋಗಲ್ಲ ಎಂದು ಮತ್ತೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದು ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ಇದುವರೆಗೆ ಅವರ ಮೇಲಿನ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದ ಯತ್ನಾಳ್ ಈಗ ಕೆಲ ಗಂಭೀರ ಆರೋಪಗಳನ್ನು ಮಾಡುತ್ತಿದ್ದು, ಭಾರೀ ಸಂಚಲನಕ್ಕೆ ಕಾರಣವಾಗಿದೆ.