ಮಂಗಳೂರು(ನವದೆಹಲಿ): ಲೋಕಸಭೆಯಲ್ಲಿ ಕಲಾಪ ನಡೆಯುತ್ತಿರುವ ವೇಳೆ ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಆತಂಕ ಸೃಷ್ಟಿಸಿದ್ದ ಆರೋಪಿಗಳ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.
ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿ ಬೆಂಕಿ ಹಚ್ಚಿಕೊಂಡು ಸಾಯುವುದು ಸೇರಿದಂತೆ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಕ್ಕೆ ನಾವು ಯೋಜನೆ ರೂಪಿಸಿದ್ದೆವು ಎಂದು ವಿಚಾರಣೆ ವೇಳೆ ಆರೋಪಿಗಳಲ್ಲಿ ಒಬ್ಬನಾದ ಲಖನೌದ ಸಾಗರ್ ಶರ್ಮಾ ಹೇಳಿಕೊಂಡಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಂದಾಗಿ ಅಸ್ತಿತ್ವದಲ್ಲಿರುವ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ತಮ್ಮನ್ನು ತಾವು ಹೊಂದಾಣಿಕೆ ಮಾಡಿಕೊಳ್ಳದಿರಲು ನಾವು ನಿರ್ಧರಿಸಿದ್ದೆವು ಎಂದು ಶರ್ಮಾ ಹೇಳಿದ್ದಾರೆ. ಮಾಧ್ಯಮಗಳ ಗಮನ ಸೆಳೆಯುವುದು ಆರೋಪಿಗಳ ಮೊದಲ ಉದ್ದೇಶವಾಗಿತ್ತು. ಬಳಿಕ ತಮ್ಮ ಅಭಿಪ್ರಾಯಗಳನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳುವುದಕ್ಕಾಗಿ ರಾಜಕೀಯ ಪಕ್ಷವನ್ನು ಸ್ಥಾಪಿಸುವುದು ಅತ್ಯಂತ ಪರಿಣಾಮಕಾರಿ ಮಾರ್ಗವೆಂದು ಬಯಸಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಮೊದಲು ಸಂಸತ್ತಿನ ಹೊರಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿದ್ದರು. ಹಾನಿಯಾಗದಂತೆ ಸುಡುವಿಕೆಗೆ ಬಳಸುವ ಜೆಲ್ ತರಹದ ವಸ್ತುಗಳನ್ನು ಆನ್‌ಲೈನ್‌ನಲ್ಲಿ ಖರೀದಿಸಲು ಹಣವನ್ನು ಸಂಗ್ರಹಿಸಿದ್ದರು. ಆದರೆ, ಆ ಯೋಜನೆಯನ್ನು ಆರೋಪಿಗಳು ಕೈಬಿಟ್ಟಿದ್ದರು ಎಂದು ತನಿಖಾಧಿಕಾರಿಗಳು ವಿವರಿಸಿದ್ದಾರೆ. ಸಂಸತ್ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಭಾರಿ ಭದ್ರತಾ ಲೋಪದ ಘಟನೆಗೆ ಲೋಕಸಭೆ ಸಾಕ್ಷಿಯಾಗಿತ್ತು.