ಮಂಗಳೂರು: ಮಂಗಳೂರು ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಕಂಕನಾಡಿಯಲ್ಲಿ ಖೋಟಾ ನೋಟುಗಳನ್ನು ಚಲಾವಣೆಗೆ ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮಂಜೇಶ್ವರದ ಕೀರ್ತೇಶ್ವರ ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ.
500 ರೂ., 200 ರೂ. ಮತ್ತು 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9 ಸಾವಿರ ರೂ.ಗಳ ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದನ್ನು ಪತ್ತೆ ಮಾಡಲಾಗಿದೆ. ಆರೋಪಿಯಿಂದ ನಕಲಿ ನೋಟುಗಳಾದ 500 ರೂ. ಮುಖಬೆಲೆಯ 3 ನೋಟುಗಳು, 200 ರೂ. ಮುಖಬೆಲೆಯ 2 ನೋಟು ಹಾಗೂ 100 ರೂ. ಮುಖಬೆಲೆಯ 3 ನೋಟುಗಳು ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.