ಮಂಗಳೂರು (ಬೆಂಗಳೂರು): ಕೇರಳದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದೆ.
ಕ್ರಿಸ್ ಮಸ್ ಹಾಗೂ ಹೊಸವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆ, ಈ ಎಲ್ಲಾ ಅಂಶಗಳನ್ನು ಗಮನದಲ್ಲಿರಿಸಿಕೊಂಡು, ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಮಾಡಿರುವ ಈ ಕೆಳಗಿನ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಸಲಹೆ ನೀಡಲಾಗಿದೆ.
ಕೋವಿಡ್ 19 ಪಾಲಿಸಬೇಕಾದ ಕ್ರಮಗಳು:
1. ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದೇ ಇರುವುದು ಸೂಕ್ತವಾಗಿದೆ.
2. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು.
3. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.
4. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು.
5. ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.