ಮಂಗಳೂರು (ಚೆನ್ನೈ): ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ವರುಣ ಅಬ್ಬರ ಮುಂದುವರಿದಿದ್ದು, ಭಾರೀ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ.
ತಮಿಳುನಾಡಿನ ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಾಶಿಗೆ ಇಂದು ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ತಿರುನೆಲ್ವೇಲಿ ಮತ್ತು ಚೆನ್ನೈ ನಡುವೆ ಸಂಚರಿಸುವ ವಂದೇ ಭಾರತ್ ಸೇರಿದಂತೆ ವಿವಿಧ ರೈಲುಗಳನ್ನು ಭಾರಿ ಮಳೆ ಹಿನ್ನೆಲೆ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ, ಗಂಟೆಗೆ 40-45 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಇದು ಗಂಟೆಗೆ 55 ಕಿಲೋಮೀಟರ್‌ಗಳವರೆಗೆ ವೇಗ ಪಡೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ದಕ್ಷಿಣ ತಮಿಳುನಾಡು ಕರಾವಳಿಯ ಮನ್ನಾರ್ ಕೊಲ್ಲಿ, ಕೊಮೊರಿನ್ ಪ್ರದೇಶ, ಲಕ್ಷದ್ವೀಪ ಪ್ರದೇಶ ಮತ್ತು ಪಕ್ಕದ ಆಗ್ನೇಯ ಅರಬ್ಬಿ ಸಮುದ್ರದ ವ್ಯಾಪ್ತಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.