ಮಂಗಳೂರು: ಶಾಲಾ ಮಕ್ಕಳನ್ನು ಕರೆತರುವ ಎಲ್ಲಾ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರ ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ ಮತ್ತು ಅದನ್ನು ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ಸಿಸ್ಟಂ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಶಾಲಾ ವಾಹನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಪೊಲೀಸರಿಂದ ಪಡೆದ ಪ್ರಮಾಣಪತ್ರಗಳನ್ನು ಪಡೆಯುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಇಲಾಖೆಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಎರಡು ವರ್ಷಗಳಿಗೊಮ್ಮೆ ಈ ಪ್ರಮಾಣಪತ್ರಗಳನ್ನು ನವೀಕರಿಸಬೇಕು. ‘ನಾವು ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಸುತ್ತೋಲೆ ಹೊರಡಿಸಿದ್ದೇವೆ. ಇದರ ಜೊತೆಗೆ ಶಾಲಾ ವಾಹನಗಳಿಗೆ ಮಹಿಳಾ ಸಹಾಯಕಿಯರನ್ನೇ ನೇಮಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
ಶಾಲಾ ವಾಹನಗಳನ್ನು ನಿರ್ವಹಿಸುವ ಚಾಲಕರು ಮತ್ತು ಸಹಾಯಕರು ಬೆಳಗ್ಗೆ ಮಕ್ಕಳನ್ನು ಶಾಲೆಗೆ ಕರೆತಂದಾಗ ಮತ್ತು ಮಕ್ಕಳನ್ನು ಮನೆಗಳಿಗೆ ಬಿಟ್ಟ ನಂತರ ಶಾಲೆಗೆ ವಾಪಸ್ ಬಂದು, ಶಾಲಾ ಮುಖ್ಯಸ್ಥರ ಸಮ್ಮುಖದಲ್ಲಿಯೇ ಹಾಜರಾತಿ ಪುಸ್ತಕಕ್ಕೆ ಕಡ್ಡಾಯವಾಗಿ ಸಹಿ ಹಾಕಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ. ಆಯಾ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಜವಾಬ್ದಾರಿಯಾಗಿದ್ದು, ಶಾಲೆಗಳಿಗೆ ಭೇಟಿ ನೀಡಿ ಸುರಕ್ಷತೆಯನ್ನು ಖಾತ್ರಿಪಡಿಸಬೇಕು. ಶಾಲಾ ಆಡಳಿತ ಮಂಡಳಿಗಳು ವಿವರಗಳನ್ನು ಪ್ರತಿ ವರ್ಷ ಬಿಇಒಗಳಿಗೆ ನೀಡಬೇಕು ಎಂದು ಸೂಚಿಸಿದೆ. ಎಲ್ಲಾ ಶಾಲಾ ವಾಹನಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸುವುದು ಮತ್ತು 2012ರಲ್ಲಿ ತಿದ್ದುಪಡಿ ಮಾಡಿದ ಕರ್ನಾಟಕ ಮೋಟಾರು ವಾಹನ ಕಾಯ್ದೆ 1989ರ ಅಡಿಯಲ್ಲಿ ಪ್ರತಿ ವಾಹನಕ್ಕೆ ನಿರ್ದಿಷ್ಟಪಡಿಸಿದ ಸಂಖ್ಯೆಯ ಮಕ್ಕಳಿಗಷ್ಟೇ ಅವಕಾಶ ನೀಡುವುದು ಸೇರಿದೆ.