ಮಂಗಳೂರು(ಬೆಂಗಳೂರು): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅರೆ ವ್ಯಾಪಕ ಪ್ರಮಾಣದ ಸಾಧಾರಣ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಚದುರಿದಂತೆ ತುಂತುರು ಮಳೆಯಾಗುವ ನಿರೀಕ್ಷೆ ಇದೆ. ಆದರೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹಿಂಗಾರು ಹಂಗಾಮಿನ ಅಕ್ಟೋಬರ್ ಮತ್ತು ಡಿಸೆಂಬರ್ ನಡುವಿನ ಅವಧಿಯಲ್ಲಿ ವಾಡಿಕೆ ಮಳೆ ಪ್ರಮಾಣ 182 ಮಿ.ಮೀ. ಆಗಿದ್ದು, 114 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. ವಾಡಿಕೆಗಿಂತ ಶೇ.38ರಷ್ಟು ಕೊರತೆ ಉಂಟಾಗಿದೆ. ಡಿಸೆಂಬರ್ ನಲ್ಲಿ ಶೇ.30ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.