ಮಂಗಳೂರು: ಕೋಲಾರ– ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಜ.19ರಂದು ಶೋಧ ನಡೆಸಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ, ಪರೀಕ್ಷಾಂಗ ಹಾಗೂ ಆಡಳಿತ ಕುಲಸಚಿವರ ಕಚೇರಿ, ಬ್ಯಾಂಕ್‌ಗಳಲ್ಲಿ ಪರಿಶೀಲನೆ ನಡೆಸಿ, ಕೊಚಿಮುಲ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಾಳಿ ನಡೆಸಿರುವುದನ್ನು ಇ.ಡಿ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ನೋಟಿಸ್ ಜಾರಿಯಾಗಿತ್ತು. ಕೊಚಿಮುಲ್ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಯನ್ನು ವಿಶ್ವವಿದ್ಯಾಲಯವು ನಡೆಸಿ, ಮೌಲ್ಯಮಾಪನ ನಡೆಸಿತ್ತು. ಇದರಲ್ಲಿ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಕೆಲ ಸಿಬ್ಬಂದಿಯೂ ಭಾಗಿಯಾಗಿರುವ ಅನುಮಾನ ಇದ್ದು, ಅವರು ತಲೆಮರೆಸಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ದೃಢಪಡಿಸಿವೆ.