ಮಂಗಳೂರು(ಕೋಲ್ಕತಾ): ಒಂದು ವಾರದೊಳಗೆ ಇಡೀ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ಶಂತನು ಠಾಕೂರ್ ಹೇಳಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಶಾಸನವನ್ನು ಏಳು ದಿನಗಳಲ್ಲಿ ತ್ವರಿತವಾಗಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ. ಶಂತನು ಠಾಕೂರ್ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಾಟುವಾ ಸಮುದಾಯದ ಹೆಚ್ಚಿನ ಜನರನ್ನು ಹೊಂದಿರುವ ಬೊಂಗಾವ್ನ ಬಿಜೆಪಿ ಸಂಸದರಾಗಿದ್ದಾರೆ.
2019ರಲ್ಲಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದ ಸಿಎಎ, 2014 ರ ಡಿಸೆಂಬರ್ 31 ಕ್ಕಿಂತ ಮೊದಲು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಪ್ರವೇಶಿಸಿದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಗುರಿ ಹೊಂದಿದೆ. “ಸಿಎಎ ಶೀಘ್ರದಲ್ಲೇ ಜಾರಿಗೆ ಬರಲಿದೆ. ಇದನ್ನು ಏಳು ದಿನಗಳಲ್ಲಿ ಜಾರಿಗೆ ತರಲಾಗುವುದು. ಇದು ನನ್ನ ಗ್ಯಾರಂಟಿ” ಎಂದು ಮಟುವಾ ಸಮುದಾಯದ ನಾಯಕರೂ, ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ರಾಜ್ಯ ಸಚಿವರೂ ಆಗಿರುವ ಠಾಕೂರ್ ಹೇಳಿದ್ದಾರೆ. ಈ ವರ್ಷದ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಸಿಎಎಯನ್ನು ದೇಶದಲ್ಲಿ ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ.