ಜೆರೋಸಾ ಶಾಲೆ ಪ್ರಕರಣ-ಇಬ್ಬರು ಶಾಸಕರ ವಿರುದ್ಧ ಪ್ರಕರಣ ದಾಖಲು-ಇಬ್ಬರು ಪಾಲಿಕೆ ಸದಸ್ಯರು, ವಿಎಚ್‌ಪಿ ಮುಖಂಡ ಶರಣ್‌ ಪಂಪ್‌ವೆಲ್‌ ವಿರುದ್ಧವೂ ಪ್ರಕರಣ ದಾಖಲು-ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಅನಿಲ್‌ ಜೆರಾಲ್ಡ್‌ ಲೋಬೊ

ಮಂಗಳೂರು: ವೆಲೆನ್ಸಿಯಾದ ಸೇಂಟ್‌ ಜೆರೋಸಾ ಶಾಲೆಯ ಬಳಿ ಫೆ.12ರಂದು ಪ್ರತಿಭಟನೆ ನಡೆಸಿದ ಸಂದರ್ಭ ‘ಜೈ ಶ್ರೀ ರಾಮ್’ ಎಂಬ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ ಹಾಗೂ ಜಿಲ್ಲೆಯಲ್ಲಿ ಶಾಂತಿ ಮತ್ತು ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿದ ಆರೋಪದ ಮೇಲೆ ಶಾಸಕ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ.ವೈ.ಭರತ್‌ ಶೆಟ್ಟಿ, ವಿಶ್ವ ಹಿಂದೂ ಪರಿಷತ್‌ ಪ್ರಾಂತ ಸಹಕಾರ್ಯವಾಹ ಶರಣ್‌ ಪಂಪ್‌ವೆಲ್‌, ಪಾಲಿಕೆ ಸದಸ್ಯರಾದ ಸಂದೀಪ್‌ ಗರೋಡಿ ಮತ್ತು ಭರತ್‌ ಕುಮಾರ್‌ ಸೇರಿದಂತೆ ಹಲವರ ವಿರುದ್ಧ ನಗರದ ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅನಿಲ್‌ ಜೆರಾಲ್ಡ್‌ ಲೋಬೊ ಎಂಬುವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬವರು ಶಾಲಾ ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಹಿಂದೂ ದೇವರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ಆಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿತ್ತು. ಪ್ರಭಾ ಅವರು ಯಾವುದೇ ಧರ್ಮಕ್ಕೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡಿಲ್ಲ. ಈ ಬಗ್ಗೆ ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ ಅವರು ಶಾಲಾ ಆಡಳಿತ ಮಂಡಳಿಯ ಜೊತೆ ವಿಚಾರ ವಿಮರ್ಶೆ ಮಾಡಿಲ್ಲ. ಆದರೂ, ಫೆ.12 ರಂದು ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಶರಣ್ ಪಂಪ್‌ವೆಲ್, ಸಂದೀಪ್ ಗರೋಡಿ ಹಾಗೂ ಭರತ್ ಕುಮಾರ್ ಅವರು ಸೇರಿ ಶಾಲೆಯ ಬಳಿ ಅಕ್ರಮವಾಗಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ. ಶಾಲೆಯ ಗೇಟ್ ಎದುರಿನಲ್ಲಿ ಅಕ್ರಮವಾಗಿ ಸೇರಿ, ‘ಜೈ ಶ್ರೀ ರಾಮ್’ ಎಂಬ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಶಾಲಾ ಆಡಳಿತ ಮಂಡಳಿಯ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸುವಂತೆ ಪ್ರಚೋದಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ವಿರುದ್ಧ ಮಾತನಾಡಿ ಬೆದರಿಕೆ ಹಾಕಿದ್ದಾರೆ. ಹಿಂದೂ ಮತ್ತು ಕ್ರೈಸ್ತ ಧರ್ಮದ ನಡುವೆ ಕದನ/ಗಲಭೆ ಉಂಟಾಗುವಂತೆ ಪ್ರಚೋದಿಸಿ ಮಾತನಾಡಿದ್ದಾರೆ. ಕೋಮು ಸೂಕ್ಷವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆಲೆಸಿರುವ ಶಾಂತಿ ಮತ್ತು ನೆಮ್ಮದಿಗೆ ಭಂಗ ತರಲು ಬಯಸಿದ್ದಾರೆ’ ಎಂದು ಅನಿಲ್‌ ಲೋಬೊ ಅವರು ದೂರಿನಲ್ಲಿ ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here