ಮಂಗಳೂರು: ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸುವುದಾಗಿ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ವಿಶ್ವ ಬಂಟರ ಸಮ್ಮೇಳನದಲ್ಲಿ ಘೋಷಣೆ ಮಾಡಿ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾವನೆ ಮಾಡದೆ ನಿರ್ಲಕ್ಷ್ಯ ಮಾಡಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಪತ್ರಿಕಾಗೋಷ್ಠಿಯಲ್ಲಿ ಹೇಳಿದೆ.
ಕಳೆದ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಕಳೆದ ಅಕ್ಟೋಬರ್ ತಿಂಗಳಲ್ಲಿ ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗವಹಿಸಿದ್ದ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ. ಮೀಸಲಿರಿಸುವುದಾಗಿ ಘೋಷಿಸಿದ್ದರು. ಆದರೆ ಮುಖ್ಯಮಂತ್ರಿಗಳು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿಗೆ ಯಾವುದೇ ಅನುದಾನ, ಅಭಿವೃದ್ಧಿ ನಿಗಮಕ್ಕೆ ಅವಕಾಶ ನೀಡದೆ ಬಂಟ ಸಮುದಾಯವನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಹೇಳಿರುವ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಬಂಟ ಸಮುದಾಯದ ಶಾಸಕರು ಈ ಬಗ್ಗೆ ಧ್ವನಿ ಎತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸರಕಾರ ಬಂಟ ಸಮುದಾಯವನ್ನು ನಿರ್ಲಕ್ಷ್ಯ ಮಾಡದೆ 500 ಕೋಟಿ ರೂ. ಅನುದಾನದೊಂದಿಗೆ ಈಗಾಗಲೇ ಘೋಷಣೆ ಮಾಡಿದಂತೆ ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಒಕ್ಕೂಟ ಒತ್ತಾಯಿಸಿದೆ.