ಮಂಗಳೂರು(ಚಿಕ್ಕಮಗಳೂರು): ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಮೂರನೇ ಬಾರಿ ಸ್ಪರ್ಧಿಸುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿರುವ ಬೆನ್ನಲ್ಲೇ ʼಗೋಬ್ಯಾಕ್ ಶೋಭಾʼ ಪತ್ರ ಅಭಿಯಾನ ಆರಂಭಿಸಿರುವ ಬಿಜೆಪಿ ಕಾರ್ಯಕರ್ತರು ಟಿಕೆಟ್ ನೀಡದಂತೆ ರಾಷ್ಟ್ರ ನಾಯಕರಿಗೆ ಪತ್ರ ಬರೆದಿದ್ದಾರೆ.
ಜೆಡಿಎಸ್, ಬಿಜೆಪಿ ಮೈತ್ರಿಯ ಬಳಿಕ ಯಾವ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎಂಬ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಈ ಬೆಳವಣಿಗೆ ನಡೆದಿದೆ. ಶೋಭಾ ಕರಂದ್ಲಾಜೆ ಎರಡು ಬಾರಿ ಆಯ್ಕೆಯಾಗಿದ್ದರೂ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯೇನೂ ನೀಡಿಲ್ಲ. ಈ ಹಿನ್ನಲೆಯಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಬಾರದು. ಹೊಸ ಮುಖಗಳಿಗೆ ಟಿಕೆಟ್ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಶೋಭಾ ಕರಂದ್ಲಾಜೆ ವಿರುದ್ದ ಕಳೆದ ಲೋಕಸಭೆ ಚುನಾವಣೆ ವೇಳೆ ʼಗೋಬ್ಯಾಕ್ ಶೋಭಾʼ ಅಭಿಯಾನ ನಡೆಸಲಾಗಿತ್ತು. ಆದರೆ ಕೆಲವು ದಿನಗಳ ಬಳಿಕ ಅಭಿಯಾನ ತೆರೆಮರೆಗೆ ಸರಿದಿತ್ತು. ಆದರೆ ಬಿಜೆಪಿಯ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಶೋಭಾ ಕರಂದ್ಲಾಜೆ ಎರಡನೇ ಬಾರಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ಮೋದಿ ಸಂಪುಟದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಸ್ಥಾನ ಪಡೆದರು. ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡದಂತೆ ಕಳೆದ ಕೆಲವು ತಿಂಗಳ ಹಿಂದೆಯೇ ನಗರದ ಕಲ್ಯಾಣ ಮಂಟಪವೊಂದರಲ್ಲಿ ಕಾರ್ಯಕರ್ತರು ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ತುಮಕೂರು ಮತ್ತು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ಪಕ್ಷವೇನಾದರೂ ಬದಲಾವಣೆ ಬಯಸಿದ್ದಲ್ಲಿ ಆ ತೀರ್ಮಾನಕ್ಕೆ ಬದ್ದರಾಗಿರುತ್ತೇನೆ ಎಂದಿದ್ದರು. ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ಯಾವ ಪಕ್ಷದವರಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಎಂದು ಖಾತ್ರಿಯಾಗಿಲ್ಲ. ಸ್ವ ಪಕ್ಷದ ಕಾರ್ಯಕರ್ತರೇ ಶೋಭಾ ಕರಂದ್ಲಾಜೆ ವಿರುದ್ದ ಹೈಕಮಾಂಡ್ ಗೆ ಪತ್ರ ರವಾನಿಸಿರುವುದು ಬಾರೀ ಕುತೂಹಲಕ್ಕೆ ಕಾರಣವಾಗಿದೆ.