ಮಂಗಳೂರು(ಮುಂಬೈ): ಶಿವಸೇನೆ ನಾಯಕ, ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ್ ಜೋಶಿ(86) ಇಂದು(ಫೆ.23) ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಮನೋಹರ್ ಜೋಶಿ ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಗಿನ ಜಾವ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಶಿಕ್ಷಕರಾಗಿ ವೃತ್ತಿ ಜೀವನ ಪ್ರಾರಂಭಿಸಿದ್ದ ಮನೋಹರ್ ಜೋಶಿ ಅವರು 1967ರಲ್ಲಿ ರಾಜಕೀಯ ಪ್ರವೇಶ ಮಾಡಿದರು. 1995ರಿಂದ 1999ರವರಗೆ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಮಹಾರಾಷ್ಟ್ರದ ಸಿಎಂ ಆಗಿ ಕಾರ್ಯ ನಿರ್ವಹಿಸಿದ ಅವಿಭಜಿತ ಶಿವಸೇನೆಯ ಮೊದಲ ಮುಖಂಡ ಎಂಬ ಖ್ಯಾತಿ ಅವರಿಗೆ ಸಲ್ಲುತ್ತದೆ. 2002ರಿಂದ 2004ರವರೆಗೆ ಲೋಕಸಭಾ ಸ್ಪೀಕರ್ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಮತ್ತು ರಾಜ್ಯಸಭಾ ಸದಸ್ಯ ಮುಂತಾದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.