ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಭಾರಿ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಸಾಮಾನ್ಯ ಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದು ಇದಕ್ಕೆ ಉತ್ತರಿಸಲು ಸಾಧ್ಯವಾಗದೆ ಎರಡೆರಡು ಬಾರಿ ಸಾಮಾನ್ಯ ಸಭೆಯನ್ನು ಮೇಯರ್ ಮುಂದೂಡಿದ ಪ್ರಸಂಗ ನಡೆಯಿತು.
ಸಭೆಯ ಆರಂಭದಲ್ಲೇ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿ ತೀವ್ರ ಪ್ರತಿಭಟನೆಗೆ ಮುಂದಾದರು. ಧಿಕ್ಕಾರ ಘೋಷಣೆಗಳನ್ನು ಕೂಗಿ ಸದನದ ಬಾವಿಗಿಳಿದು ಪ್ರತಿಭಟಿಸಿದರು. ಪ್ರತಿಭಟನೆ ತೀವ್ರ ಗೊಳ್ಳುವುದನ್ನು ಅರಿತ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸಭೆಯನ್ನು ಮೊದಲ ಬಾರಿ ಮುಂದೂಡಿದ್ದು, ಎಲ್ಲಾ ಬಿಜೆಪಿ ಸದಸ್ಯರು ಸಭೆಯಿಂದ ಹೊರ ನಡೆದರು.
ಕೆಲ ಸಮಯದ ಬಳಿಕ ಮತ್ತೆ ಸಭೆ ಆರಂಭವಾಯಿತಾದರೂ ಕಾಂಗ್ರೆಸ್ ಸದಸ್ಯರು ಪಟ್ಟು ಬಿಡಲಿಲ್ಲ. ಪ್ಲೆಕಾರ್ಡ್ ಗಳನ್ನು ಹಿಡಿದು ಮತ್ತೆ ಸದನದ ಬಾವಿಗೆ ಇಳಿದು ತೀವ್ರ ಪ್ರತಿಭಟನೆ ನಡೆಸಿದರು. ಸಾಮಾನ್ಯ ಸಭೆಯಲ್ಲಿ ಇದು ತೀವ್ರ ಗದ್ದಲಕ್ಕೆ ಕಾರಣವಾಯಿತು. ಇತ್ತ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರೆ ಅತ್ತ ಬಿಜೆಪಿ ಸದಸ್ಯರು ಕೂಡ ಸದನದ ಬಾವಿಗಿಳಿದು ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಘೋಷಣೆಗಳನ್ನು ಕೂಗಿದರು. ಈ ಕಾರಣದಿಂದಾಗಿ ಸದನವನ್ನು ಎರಡನೇ ಬಾರಿಗೆ ಮುಂದೂಡಿ ಮೇಯರ್ ಹೊರ ನಡೆದರು.