ಮಂಗಳೂರು: ಕಾರಿನ ಟಯರ್ ಸಿಡಿದು ದ್ವಿಚಕ್ರ ವಾಹನಕ್ಕೆ ಬಡಿದ ಪರಿಣಾಮ ಸವಾರ ಡಿವೈಡರ್‌ಗೆ ಬಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಬಳಿ ಇಂದು ನಡೆದಿದೆ. ಮೃತರನ್ನು ಕೊಲ್ಯ ನಿವಾಸಿ ಸಂತೋಷ್ ಬೆಳ್ಚಡ (45) ಎಂದು ಗುರುತಿಸಲಾಗಿದೆ.
ಉಳ್ಳಾಲ ಸಮೀಪದ ಕೊಲ್ಯದಲ್ಲಿ ಒಂದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತೀ ವೇಗದಿಂದ ಬಂದ ಥಾರ್ ಜೀಪ್ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಚಕ್ರ ಸಿಡಿದು ಮುಂದಿನಿಂದ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಡಿದಿದೆ. ಇದರಿಂದ ದ್ವಿಚಕ್ರ ವಾಹನ ಸವಾರ ಆಯ ತಪ್ಪಿ ಡಿವೈಡರ್ ಮೇಲೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಡಿವೈಡರ್‌ಗೆ ತಲೆ ಬಡಿದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತ ಸಂತೋಷ್ ಬಾಳೆಹಣ್ಣು ವ್ಯಾಪಾರಿಯಾಗಿದ್ದು, ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಧರ್ಮಸ್ಥಳದಿಂದ ಕಾಞಂಗಾಡ್ ಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದರು ಎನ್ನಲಾಗಿದೆ. ವಿವಾಹಿತರಾಗಿದ್ದ ಸಂತೋಷ್ ತಂದೆ, ತಾಯಿ,ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.