ಮಂಗಳೂರು: ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಎರಡು ದಿನಗಳ ಹಿಂದೆ ಆಳ್ವಾಸ್ ಪಿಯು ಕಾಲೇಜಿನ ಹಾಸ್ಟೆಲ್ ನಲ್ಲಿ ಕಾಲೇಜು ಅಧ್ಯಾಪಕರ ಅವಮಾನ, ಕಿರುಕುಳ ಸಹಿಸಲಾಗದೆ ಆತ್ಮಹತ್ಯೆ ಮಾಡಿದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಂಜಯ್ ಭುವನ್ ರವರ ಸಾವಿಗೆ ಕಾರಣರಾದ ಅಧ್ಯಾಪಕರನ್ನು ವಜಾಗೊಳಿಸಲು ಆಗ್ರಹಿಸಿ ಕಾಲೇಜಿಗೆ ಮುತ್ತಿಗೆ ಹಾಕಲಾಯಿತು.
ಈ ಸಂದರ್ಭದಲ್ಲಿ ಹಾಸ್ಟೆಲ್ ವಿಭಾಗದ ಮುಖ್ಯಸ್ಥರಿಂದ ಪೊಲೀಸರು ತನಿಖೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಎನ್‌ಎಸ್‌ಯುಐ ಕಾರ್ಯಕರ್ತರು ಮೂಡಬಿದ್ರಿ ಪೊಲೀಸ್ ಠಾಣೆಗೆ ತೆರಳಿ ಠಾಣಾಧಿಕಾರಿ ಜೊತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತುಕತೆ ನಡೆಸಿದರು. ಈ ಸಾವಿನ ಕುರಿತು ಮತ್ತು ಈ ಹಿಂದೆ ನಡೆದಿರುವ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಮತ್ತು ಸಂಜಯ್ ಭುವನ್ ಸಾವಿನ ಬಗ್ಗೆ ಕೂಲಂಕುಶವಾಗಿ ತನಿಖೆ ನಡೆಸುವಂತೆ ಠಾಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಕಾಲೇಜು ಆಡಳಿತ ಮಂಡಳಿಗೆ ಸೂಚಿಸಲು ಮನವಿ ಸಲ್ಲಿಸಲಾಯಿತು. ಸಂಜಯ್ ಭುವನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಿ ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.