ಮಂಗಳೂರು(ನವದೆಹಲಿ): ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಭಾರತೀಯ ಸ್ಟೇಟ್ ಬ್ಯಾಂಕ್‌ಗೆ ಸುಪ್ರೀಂ ಕೋರ್ಟ್ ಮತ್ತೆ ನೋಟಿಸ್ ನೀಡಿದೆ.
ರಾಜಕೀಯ ಪಕ್ಷಗಳು ಪಡೆದಿರುವ ಚುನಾವಣಾ ಬಾಂಡ್‌ಗಳ ಸಂಖ್ಯೆಯನ್ನು ಬಹಿರಂಗಪಡಿಸಬೇಕು ಎಂದು ಎಸ್‌ಬಿಐಗೆ ಆದೇಶಿಸಿರುವ ಸುಪ್ರೀಂ ಕೋರ್ಟ್, ಪ್ರಕರಣ ಸಂಬಂಧ ಬ್ಯಾಂಕ್‌ನ ಪ್ರತಿಕ್ರಿಯೆಯನ್ನು ಕೇಳಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿದ್ದ ಐವರು ನ್ಯಾಯಮೂರ್ತಿಗಳ ಪೀಠವು ಈ ಆದೇಶ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಿದೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಮಾರ್ಚ್ 11ರ ಆದೇಶದಲ್ಲಿ ಮಾರ್ಪಾಡು ಕೋರಿ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ(ಮಾ.15) ಕೈಗೆತ್ತಿಕೊಂಡಿತ್ತು. ಚುನಾವಣಾ ಬಾಂಡ್ ಗಳು ಅಸಾಂವಿಧಾನಿಕ ಎಂದು ಫೆಬ್ರುವರಿ 15ರಂದು ಘೋಷಿಸಿದ್ದ ಸುಪ್ರೀಂ ಕೋರ್ಟ್, ಇವುಗಳನ್ನು ರದ್ದುಪಡಿಸಿ ತೀರ್ಪು ನೀಡಿತ್ತು. ಅಲ್ಲದೆ ದಾನಿಗಳು ಮತ್ತು ದೇಣಿಗೆ ಪಡೆದವರನ್ನು ಬಹಿರಂಗ ಪಡಿಸುವಂತೆ ನಿರ್ದೇಶಿಸಿತ್ತು.
ಇನ್ನೊಂದೆಡೆ ನೂತನ ಚುನಾವಣಾ ಆಯುಕ್ತರ ನೇಮಕಾತಿಗೆ ತಡೆನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು ಈ ಕುರಿತ ವಿಚಾರಣೆಯನ್ನು ಮುಂದಿನವಾರ ನಡೆಸುವುದಾಗಿ ಹೇಳಿದೆ.