ಮಂಗಳೂರು(ಬೆಂಗಳೂರು): ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಿದೆ.
ಯಡಿಯೂರಪ್ಪ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದು, ಅಧಿಕೃತ ಆದೇಶ ಹೊರಬಿದ್ದಿದೆ. ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಸಂತ್ರಸ್ತೆಯ ತಾಯಿ ಈ ಹಿಂದೆ 53 ಮಂದಿ ವಿರುದ್ಧ ದೂರು ನೀಡಿದ್ದರು. ಆ ಪೈಕಿ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳೂ ಸೇರಿದ್ದರು ಎನ್ನಲಾಗಿದೆ. ಈ ಮಧ್ಯೆ, ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥರಾಗಿರಬಹುದು ಎಂದು ಕೆಲವರು ಹೇಳುತ್ತಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದಾರೆ.