ಮಂಗಳೂರು: ತೆಲಂಗಾಣ ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಗೆ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪುದುಚೇರಿಯಲ್ಲಿ ಎನ್ಆರ್ ಕಾಂಗ್ರೆಸ್-ಬಿಜೆಪಿ ಮೈತ್ರಿಕೂಟದ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಕೆಲವು ದಿನಗಳ ಹಿಂದೆ ತಮಿಳ್ ಸಾಯಿ ಸೌಂದರರಾಜನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕತ್ವದಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ. ಅವರು ದೆಹಲಿಯಲ್ಲಿ ರಾಜೀನಾಮೆ ಸಲ್ಲಿಸಿದ್ದು, ಸೋಮವಾರ ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿಯ ಮೂರನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೌಂದರರಾಜನ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅವರು ಉತ್ತರ ತಮಿಳುನಾಡು, ಪುದುಚೇರಿ ಅಥವಾ ಚೆನ್ನೈ ದಕ್ಷಿಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಒಂದೊಂದಾಗಿ ಬಿಡುಗಡೆ ಮಾಡುತ್ತಿದೆ. ಇದಕ್ಕೂ ಮುನ್ನ ಬಿಜೆಪಿ ಮೊದಲ ಹಂತದಲ್ಲಿ 195 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು.