ಮಂಗಳೂರು : ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಮಂಗಳೂರು ನಗರಕ್ಕೆ ಗೋವಾ ರಾಜ್ಯದಿಂದ ನಿಷೇದಿತ ಮಾದಕ ವಸ್ತುವಾದ ಕೋಕೆನ್ ನ್ನು ಖರೀದಿಸಿಕೊಂಡು ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಕೋಕೆನ್ ನ್ನು ಮಾರಾಟ/ಸಾಗಾಟ ಮಾಡುತ್ತಿದ್ದ ಸಣ್ಣಮದಕ, ಅಂಬ್ಲ ಮೊಗರರಿನ ಸದಕತ್.ಯು ಯಾನೆ ಶಾನ್ ನವಾಜ್(31) ಮತ್ತು ಅಂಬ್ಲ ಮೊಗರು ಸೇನರಬೆಟ್ಟು ಮನೆ, ಮದಕದ ಮಹಮ್ಮದ್ ಅಶ್ಫಕ್ ಯಾನೆ ಅಶ್ಫಾ(25) ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳಿಂದ ಹೊಂಡಾ ಅಕ್ಟಿವಾ ಸ್ಕೂಟರ್ ಸೇರಿದಂತೆ 2,72,000/- ರೂ ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೋಕೆನ್, 3 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪಕ, ನಗದು ರೂ. 5560/-ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಆರೋಪಿಗಳ ಪೈಕಿ ಸದಕತ್.ಯು ಯಾನೆ ಶಾನ್ ನವಾಜ್ ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಕೋಕೆನ್ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.