ಮಂಗಳೂರು(ಬೆಂಗಳೂರು): ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನ ಸೂಚಿಸಿ ಜೆಡಿಎಸ್ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆಯಾಗಿದ್ದ, ಯುವ ನಾಯಕಿ ನಜ್ಮಾ ನಝೀರ್ ಚಿಕ್ಕನೇರಳೆ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಸ್ಟಾರ್ ಪ್ರಚಾರಕಿಯಾಗಿದ್ದ ನಜ್ಮಾ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿಯ ಘೋಷಣೆಯಾಗುತ್ತಿದ್ದಂತೆಯೇ ಮೌನಕ್ಕೆ ಶರಣಾಗಿದ್ದರು. ಈಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಜೆಡಿಎಸ್ ಪಕ್ಷದ ಮುಖಂಡರು ಕೋಮುವಾದಿ ಪಕ್ಷವಾಗಿರುವ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದಾರೆ. ಇದಕ್ಕೆ ನಮ್ಮ ಸಹಮತವಿಲ್ಲ. ಹಾಗಾಗಿ, ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಯನ್ನು ಸೋಲಿಸಲು ನನ್ನಿಂದಾದ ಕಾರ್ಯವನ್ನು ಮಾಡುತ್ತೇನೆ. ಕೋಮುವಾದದ ವಿರುದ್ಧ ನನ್ನ ಹೋರಾಟ ಮುಂದುವರಿಯಲಿದೆ” ಎಂದು ನಜ್ಮಾ ತಿಳಿಸಿದ್ದಾರೆ.ಬಿಜೆಪಿ ಜೊತೆಗಿನ ಮೈತ್ರಿಯಿಂದಾಗಿ ಜೆಡಿಎಸ್‌ನಲ್ಲಿ ಹಲವು ಮಂದಿಗೆ ಇನ್ನೂ ಅಸಮಾಧಾನವಿದೆ. ಹಾಗಾಗಿ, ಕೆಲವೇ ದಿನಗಳಲ್ಲಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅಥವಾ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಹಲವು ಮಂದಿ ಹಾಲಿ ಜೆಡಿಎಸ್ ಕಾರ್ಪೊರೇಟರ್ ಹಾಗೂ ಇತರೆ ಸ್ಥಳೀಯ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ” ಎಂದು ನಜ್ಮಾ ನಝೀರ್ ಮಾಹಿತಿ ನೀಡಿದ್ದಾರೆ.
ನಜ್ಮಾ ಅವರೊಂದಿಗೆ ಯುವ ಜನತಾದಳದ ಕಾರ್ಯಾಧ್ಯಕ್ಷ ನೂರ್ ಸಹಿತ ಸುಮಾರು 50 ಮಂದಿ ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಚಿವ ನಬೀ ಸಾಬ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.