ಮಂಗಳೂರು(ನವದೆಹಲಿ): ಪತಂಜಲಿ ಸುಳ್ಳು ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮದೇವ್ ಹಾಗೂ ಪತಂಜಲಿ ಆಯುರ್ವೇದ ಕಂಪನಿಯ ಎಂಡಿ ಆಚಾರ್ಯ ಬಾಲಕೃಷ್ಣ ಅವರು ಎ.2ರಂದು ಸುಪ್ರೀಂಕೋರ್ಟ್‌ಗೆ ಹಾಜರಾಗಿದ್ದಾರೆ.
ಈ ಪ್ರಕರಣದಲ್ಲಿ ಉತ್ತರಿಸಲು ನೋಟಿಸ್ ನೀಡಿದ್ದರೂ ನಿರ್ಲಕ್ಷಿಸಿದ್ದ ಈ ಇಬ್ಬರೂ ಕೋರ್ಟ್ ಮುಂದೆ ಖುದ್ದು ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ತಾಕೀತು ಮಾಡಿತ್ತು. ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠದ ಮುಂದೆ ಬಾಬಾ ರಾಮದೇವ್ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಹಾಜರಾಗಿದ್ದು, ವಿಚಾರಣೆ ನಡೆಯುತ್ತಿದೆ. ಬಾಬಾ ರಾಮದೇವ್ ಹಾಗೂ ಆಚಾರ್ಯ ಬಾಲಕೃಷ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇವರ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬಾರದು ಎಂದು ಪೀಠ ಮಾರ್ಚ್ 19ರಂದು ಕೇಳಿತ್ತು. ನ್ಯಾಯಾಂಗ ನಿಂದನೆ ದಾಖಲಿಸುವ ಬಗ್ಗೆ ಬಾಬಾ ರಾಮದೇವ್ ಅವರಿಗೆ ಪೀಠ ಶೋಕಾಸ್ ನೋಟಿಸ್ ಅನ್ನೂ ಜಾರಿಗೊಳಿಸಿತ್ತು. ವಿವಿಧ ಕಾಯಿಲೆಗಳ ಚಿಕಿತ್ಸೆ ಸಂಬಂಧ ಪತಂಜಲಿಯು ತನ್ನ ಉತ್ಪನ್ನಗಳ ಕುರಿತು ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡುತ್ತಿದ್ದರೂ ಕೇಂದ್ರ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ತರಾಟೆಗೆ ತೆಗೆದುಕೊಂಡಿತ್ತಲ್ಲದೆ ರಕ್ತದೊತ್ತಡ, ಮಧುಮೇಹ, ಅಸ್ತಮಾ ಮತ್ತು ಇತರ ಕೆಲವು ಕಾಯಿಲೆಗಳಿಗೆ ಸಂಬಂಧಿಸಿದ ಯಾವುದೇ ಜಾಹೀರಾತುಗಳನ್ನು ನೀಡದಂತೆ ಪೀಠವು ಕಂಪನಿ ಮೇಲೆ ನಿರ್ಬಂಧ ವಿಧಿಸಿತ್ತು. ಭಾರತೀಯ ವೈದ್ಯಕೀಯ ಸಂಘ ಪತಂಜಲಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಿದೆ.