ಮಂಗಳೂರು (ಹುಬ್ಬಳ್ಳಿ): ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್ನಲ್ಲಿರುವ ಕ್ಯಾಂಟೀನ್ನಲ್ಲಿ ಫಯಾಜ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫಯಾಜ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಸಂಜೆ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿ ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಆರೋಪಿ ಫಯಾಜ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.
ಈ ನಡುವೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ” ಎಂದು ಹೇಳಿದ್ದಾರೆ.