ಮಂಗಳೂರು/ಹೊಸದಿಲ್ಲಿ: ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಸಂಬಂಧ ಚುನಾವಣಾ ಆಯೋಗ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತು ಸಂದೀಪ್ ಮೆಹ್ತಾ ಅವರನ್ನೊಳಗೊಂಡು ವಿಭಾಗೀಯ ಪೀಠದ ಮುಂದೆ ವಿಚಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಈ ವಿಷಯವನ್ನು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಬರಪೀಡಿತ ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ನೈಸರ್ಗಿಕ ವಿಪತ್ತು ನಿಧಿಯಿಂದ ಹಣ ನೀಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಕೇಂದ್ರ ಸರ್ಕಾರದ ನಡೆಯಿಂದಾಗಿ ಕರ್ನಾಟಕದ ಜನತೆಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ಬಂದಿದೆ. ಹೀಗಾಗಿ ಅನಿವಾರ್ಯವಾಗಿ ನ್ಯಾಯಾಲಯದ ಮೊರೆ ಬಂದಿರುವುದಾಗಿ ಕರ್ನಾಟಕ ಸರ್ಕಾರ ತಿಳಿಸಿತ್ತು. ಆರು ತಿಂಗಳಾದರೂ ಕೇಂದ್ರ ಸರ್ಕಾರದ ಹಲವು ಇಲಾಖೆಗಳ ಅಧಿಕಾರಿಗಳ ತಂಡ ನೀಡಿದ ವರದಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿಲ್ಲ. ರಾಷ್ಟ್ರೀಯ ನೈಸರ್ಗಿಕ ವಿಪತ್ತು ನಿಧಿಯಿಂದ ಹಣ ಬಾರದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಪರಿಸ್ಥಿತಿ ಅತ್ಯಂತ ಶೋಚನೀಯವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.
ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಈ ಸಂಬಂಧ ಯಾವುದೇ ನೋಟಿಸ್ ನೀಡದಂತೆ ಬೇಡಿಕೊಂಡಿದ್ದರಲ್ಲದೆ, ಹದಿನೈದು ದಿನಗಳ ಕಾಲಾವಕಾಶ ಕೋರಿದ್ದರು. ಹದಿನೈದು ದಿನಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ವಿಚಾರಣೆ ನಡೆದು ಬರಪರಿಹಾರದ ಹಣ ನೀಡಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ರೈತರಿಗೆ ನ್ಯಾಯಯುತ ಪರಿಹಾರ ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.