ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಮಂಗಳೂರು(ನವದೆಹಲಿ): ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಎ.27) ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ.

ರಾಜ್ಯ ಸರ್ಕಾರ ಕಳೆದ ಸೆಪ್ಟೆಂಬರ್‌ನಲ್ಲಿ ಬರ ಪರಿಹಾರ ಕೋರಿ ಕೇಂದ್ರಕ್ಕೆ ಮೊರೆ ಹೋಗಿತ್ತು. ಆದರೆ, ಬರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಾಗ್ದಾನ ನೀಡಿತ್ತು. ಕೋರ್ಟ್‌ನಲ್ಲಿ ವಿಚಾರಣೆ ಕಾಲಕ್ಕೆ, ‘ಕರ್ನಾಟಕದಲ್ಲಿ ಬರ ನಿರ್ವಹಣೆಗೆ ಹಣಕಾಸು ನೆರವು ನೀಡುವಂತೆ ರಾಜ್ಯ ಸರ್ಕಾರ ಮುಂದಿಟ್ಟಿರುವ ಬೇಡಿಕೆಯನ್ನು ಈಡೇರಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ’ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು. ‘ಇದು ರಾಜ್ಯಕ್ಕೆ ಸಿಕ್ಕಿರುವ ಜಯ’ ಎಂದು ಪ್ರತಿಪಾದಿಸಿದ್ದ ರಾಜ್ಯ ಸರ್ಕಾರ, ‘ವಾರದೊಳಗೆ ಬರ ಪರಿಹಾರ ಬಿಡುಗಡೆಯಾಗಲಿದ್ದು, ಸುಪ್ರೀಂ ಕೋರ್ಟ್‌ನ ಮಧ್ಯ ಪ್ರವೇಶದಿಂದ ರಾಜ್ಯಕ್ಕೆ ನ್ಯಾಯ ಸಿಕ್ಕಿದೆ’ ಎಂದು ಅಭಿಪ್ರಾಯಪಟ್ಟಿತ್ತು.

ರಾಜ್ಯದ ಬರಪರಿಹಾರ ಸಂಬಂಧ ಕೇಂದ್ರಕ್ಕೆ 18,174 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಮನವಿ ಮಾಡಿದ್ದೆವು. ಆದರೆ ನಾವು ಕೇಳಿದ ಮೊತ್ತದ ಕಾಲು ಭಾಗಕ್ಕಿಂತಲೂ ಕಡಿಮೆ ಮೊತ್ತ ನೀಡುವುದಾಗಿ ಹೇಳಿದ್ದಾರೆ. ಇದು ಯಾವುದಕ್ಕೆ ಸಾಲುತ್ತದೆ? ಅಧಿಕಾರಿಗಳ ಜೊತೆ ಚರ್ಚಿಸಿ ನಮ್ಮ ನಿಲುವು ತಿಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಕಲಬುರ್ಗಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

 

LEAVE A REPLY

Please enter your comment!
Please enter your name here