ಸಿಸಿಬಿ ಕಾರ್ಯಾಚರಣೆ-ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರ ಸೆರೆ

ಮಂಗಳೂರು(ಉಳ್ಳಾಲ):ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡಿರುವ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡು ಯಾವುದೋ  ದುಷ್ಕೃತ್ಯವನ್ನು ನಡೆಸುವುದಕ್ಕಾಗಿ  ತಿರುಗಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ್ದ ಮಂಜೇಶ್ವರದ ಮುರ್ತಾನ ಕಡಂಬರ್ ನಿವಾಸಿ ಮೊಹಮ್ಮದ್ ಅಸ್ಕರ್(26) ಮತ್ತು ಮಂಜೇಶ್ವರದ ಮೂಡಂಬೈಲ್ ಬೆಜ್ಜಾ ಮನೆ ನಿವಾಸಿ ಅಬ್ದುಲ್ ನಿಸಾರ್.ಕೆ(29) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ 1 ಪಿಸ್ತೂಲ್, 2 ಸಜೀವ ಮದ್ದುಗುಂಡುಗಳು, 2 ಮೊಬೈಲ್ ಫೋನುಗಳು ಹಾಗೂ ಕಪ್ಪು ಬಣ್ಣದ ಹುಂಡೈ ವೆರ್ನಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯ ಪೈಕಿ ಮೊಹಮ್ಮದ್ ಅಸ್ಗರ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟದ ಪ್ರಕರಣ ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳ ಹಾಗೂ ಅಕ್ರಮ ಪಿಸ್ತೂಲ್ ಪತ್ತೆ ಕಾರ್ಯವನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಸುದೀಪ್ ಎಂ ವಿ ಮತ್ತು ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here