ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹದ ಸಮೀಪದ ಡಯೆಟ್ ಕಾಲೇಜ್ ಬಳಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮಂಗಳೂರು ತೋಟ ಬೆಂಗ್ರೆ ನಿವಾಸಿ ದೀಕ್ಷಿತ್ ನಾಯಕ್ ಮತ್ತು ಮಡಿಕೇರಿಯ ಕೆ ಎಸ್ ಆರ್ ಟಿ ಸಿ ಡಿಪೋ ಹಿಂಬದಿ ನಿವಾಸಿ ಕಾರ್ತಿಕ್ ಎಂಬವರಿಗೆ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಶ್ರಿ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ತಲಾ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
2018 ಜೂನ್.20ರಂದು ಆರೋಪಿಗಳ ವಿರುದ್ಧ ಬರ್ಕೆ ಪೊಲೀಸರು ಎನ್ ಡಿ ಪಿ ಎಸ್ ಕಾಯ್ದೆ ಅನ್ವಯ ದೂರು ದಾಖಲಿಸಿದ ಆಗಿನ ಪೋಲಿಸ್ ಉಪ ನಿರೀಕ್ಷಕಿ ಶೋಭಾ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ತಲಾ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ತೆರಲು ತಪ್ಪಿದಲ್ಲಿ 10 ದಿನಗಳ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ಹೇಳಲಾಗಿದೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ಸಾಕ್ಷಿಗಳ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.