ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ-ಹಲವು ರಾಜ್ಯಗಳಲ್ಲಿ ದಾಳಿ ನಡೆಸಿದ ಎನ್‌ಐಎ

ಮಂಗಳೂರು(ನವದೆಹಲಿ): ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ವಿವಿಧ ರಾಜ್ಯಗಳಿಗೆ ಸೇರಿದ ಹಲವೆಡೆ ಮಂಗಳವಾರ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ಮಾರ್ಚ್ 1ರಂದು ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡು ಹಲವರು ಗಾಯಗೊಂಡಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಈಗಾಗಲೇ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇವರಿಂದ ಲಭ್ಯವಾದ ಮಾಹಿತಿ ಆಧರಿಸಿ, ದೇಶದ ಹಲವೆಡೆ ದಾಳಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈಗ ನಡೆದಿರುವ ದಾಳಿಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆ ಮತ್ತು ಬನಶಂಕರಿಯೂ ಸೇರಿದೆ. ಮಾರ್ಚ್‌ 3ರಂದು ಎನ್‌ಐಎ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿತ್ತು. ಏ. 12ರಂದು ಅಬ್ದುಲ್ ಮಥೀನ್‌ ಅಹಮದ್ ತಾಹಾ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುಧಾರಿತ ಸ್ಫೋಟಕ ಸಾಧನವನ್ನು ಕೆಫೆಯಲ್ಲಿ ಇರಿಸಿದ ಮಸಾವೀರ್ ಹುಸೇನ್ ಶಾಝಿಬ್ ಹಾಗೂ ತಾಹಾ ಇಬ್ಬರನ್ನು ಕೊಲ್ಕತ್ತದ ಲಾಡ್ಜ್‌ ಒಂದರಲ್ಲಿ ವಶಕ್ಕೆ ಪಡೆಯಲಾಗಿತ್ತು. ಅಲ್ಲಿ ಅವರು ತಮ್ಮ ಗುರುತು ಮರೆಮಾಚಿಕೊಂಡು ಇದ್ದರು. ಈ ಇಬ್ಬರು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಇಸ್ಲಾಮಿಕ್‌ ಸ್ಟೇಟ್‌ ಭಯೋತ್ಪಾದನಾ ಸಂಘಟನೆಗೆ ಸೇರಿದವರಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here