ಕೋರ್ಟ್‌ಗೆ ನಕಲಿ ದಾಖಲೆ ಸಲ್ಲಿಸಿದ್ದರೆ ಬಾಧಿತರು ಕ್ರಿಮಿನಲ್ ದೂರು ದಾಖಲಿಸಬಹುದು: ಕರ್ನಾಟಕ ಹೈಕೋರ್ಟ್‌

ಮಂಗಳೂರು(ಬೆಂಗಳೂರು): ನಕಲಿ ದಾಖಲೆಯನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದರೆ, ಅಂತಹ ಸಂದರ್ಭದಲ್ಲಿ ಖಾಸಗಿ ವ್ಯಕ್ತಿಗಳೂ ಪೊಲೀಸ್ ಠಾಣೆ ಅಥವಾ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾ. ಸೂರಜ್ ಗೋವಿಂದ ರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ. ತೀರ್ಥಹಳ್ಳಿ ತಾಲೂಕು ನಿವಾಸಿ ವಸಂತಿ ಎಂಬವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ. ತೀರ್ಥಹಳ್ಳಿ ತಾಲೂಕಿನ ಗಬಡಿ ಗ್ರಾಮದ ನಿವೇಶನಕ್ಕೆ ಸಂಬಂಧಿಸಿದಂತೆ ವಸಂತಿ ಅವರು 2015ರಲ್ಲಿ ಉಮೇಶ್ ಎಂಬವರ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ಸಿವಿಲ್ ವ್ಯಾಜ್ಯ ಹೂಡಿದ್ದರು. ವಸಂತಿ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ಉಮೇಶ್ ಪ್ರತ್ಯೇಕ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ವಿಚಾರಣಾ ನ್ಯಾಯಾಲಯವು ಈ ಖಾಸಗಿ ದೂರಿನ ಸಂಜ್ಞೇಯತೆಯನ್ನು ಪಡೆದುಕೊಂಡು ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಈ ಖಾಸಗಿ ದೂರನ್ನು ವಜಾ ಮಾಡಬೇಕೆಂದು ವಸಂತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ವಿಚಾರಣೆ ಬಳಿಕ ಈ ಅರ್ಜಿಯನ್ನು ವಜಾಗೊಳಿಸಿದೆ.

LEAVE A REPLY

Please enter your comment!
Please enter your name here