ಮಂಗಳೂರು (ಬೆಂಗಳೂರು/ಮೈಸೂರು): ವಿಧಾನ ಪರಿಷತ್ ನ ಪದವೀಧರ ಮತ್ತು ಶಿಕ್ಷಕರ 6 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಇಂದು ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಬೆಂಗಳೂರು, ಮೈಸೂರು ಹಾಗೂ ಕಲಬರಗಿಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ರಾತ್ರಿ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಬೆಂಗಳೂರಿನ ಕಲಾ ಕಾಲೇಜಿನಲ್ಲಿ ನಡೆಯುತ್ತಿದ್ದು, ಈಶಾನ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಗುಲ್ಬರ್ಗ ವಿಶ್ವವಿದ್ಯಾಲಯದ ಹೇಮರೆಡ್ಡಿ ಮಲ್ಲಮ್ಮ ಕಟ್ಟಡದಲ್ಲಿ ನಡೆಯುತ್ತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ನಡೆಯುತ್ತಿದೆ.
ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಯಲ್ಲಿ 23,402 ಮತದಾರರಿದ್ದು, 19,320 ಶಿಕ್ಷಕರು ಮತ ಚಲಾಯಿಸಿದ್ದಾರೆ. 82.56% ಮತದಾನವಾಗಿದ್ದು, 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ನಡೆದಿದ್ದು, ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್ ಎಲ್ ಭೋಜೇಗೌಡ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ ಮಂಜುನಾಥ್ಗೆ ಹಿನ್ನಡೆಯಾಗಿದೆ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ 85,089 ಮತದಾರರಿದ್ದು 66,529 ಮತದಾರರು ಮತ ಚಲಾಯಿಸಿದ್ದಾರೆ. 10 ಜನ ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿಯಿಂದ ಡಾ.ಧನಂಜಯ ಸರ್ಜೀ ಹಾಗೂ ಕಾಂಗ್ರೆಸ್ನಿಂದ ಆಯನೂರು ಮಂಜುನಾಥ್ ನಡುವೆ ನೇರ ಸ್ಪರ್ಧೆ ನಡೆದಿದ್ದರೆ, ಬಿಜೆಪಿಯಿಂದ ಟಿಕೆಟ್ ಸಿಗದೇ ಬಂಡಾಯವಾಗಿ ಸ್ಪರ್ಧೆ ಮಾಡಿರುವ ರಘುಪತಿ ಭಟ್ ಸ್ಪರ್ಧೆಯಿಂದಾಗಿ ಫಲಿತಾಂಶ ಕುತೂಹಲ ಕೆರಳಿಸಿದೆ.