ರೇಣುಕಾ ಸ್ವಾಮಿ ಹತ್ಯೆ ಪ್ರಕರಣ – ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಮಂಗಳೂರು (ಮೈಸೂರು): ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಖ್ಯಾತ ಕನ್ನಡ ಚಲನಚಿತ್ರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಿತ್ರದುರ್ಗ ನಿವಾಸಿ ರೇಣುಕಾ ಸ್ವಾಮಿ ಎಂಬವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಅವರನ್ನು ಮೈಸೂರಿನಲ್ಲಿರುವ ಫಾರ್ಮ್ ಹೌಸ್ ನಿಂದ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ದರ್ಶನ್‌ ಸೇರಿದಂತೆ 10 ಮಂದಿಯನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಏನಿದು ಪ್ರಕರಣ?…

ನಟ ದರ್ಶನ್‌ ಅವರಿಗೆ ಆತ್ಮೀಯವಾಗಿರುವ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ. ಇದಲ್ಲದೆ ಕೆಟ್ಟದಾಗಿ ಮೆಸೇಜ್‌ ಮಾಡುತ್ತಿದ್ದ ಎನ್ನಲಾಗಿದೆ. ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಕರೆಯಲಾಗಿತ್ತು. ಜೂ.8ರಂದು ರಾತ್ರಿ ವಿನಯ್‌ ಎನ್ನುವವರ ಶೆಡ್‌ ಗೆ ಕರೆತಂದು ಬಲವಾಧ ಆಯುಧದಿಂದ ರೇಣುಕಾ ಅವರಿಗೆ ಹೊಡೆದು ಕೊಲೆಗೈದು, ಮೃತದೇಹನ್ನು ಮೋರಿಗೆ ಎಸೆಯಲಾಗಿತ್ತು. ಘಟನೆ ಸಂದರ್ಭದಲ್ಲಿ ದರ್ಶನ್‌ ಕೂಡ ಸ್ಥಳದಲ್ಲೇ ಇದ್ದರು ಎನ್ನಲಾಗಿದೆ. ದರ್ಶನ್‌ ಸೇರಿದಂತೆ ನಾಲ್ವರು ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿ ಅವರ ಆತ್ಮಹತ್ಯೆ ಪ್ರಕರಣ, ತನಿಖೆ ಬಳಿಕ ಅದು ಕೊಲೆ ಎಂಬುದು ದೃಢಪಟ್ಟ ಕಾರಣ ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿತ್ತು. ಈ ಪ್ರಕರಣದಲ್ಲಿ ಮೂವರು ಮೊದಲು ಠಾಣೆಗೆ ಹಾಜರಾಗಿ ʼನಾವೇ ಕೊಲೆ ಮಾಡಿದ್ದು, ಹಣಕಾಸಿನ ವಿಚಾರದಲ್ಲಿ ಈ ಕೊಲೆಯನ್ನು ಮಾಡಿದ್ದೇವೆʼ ಎಂದು ಹೇಳಿದ್ದಾರೆ. ಆದರೆ ಪೊಲೀಸರಿಗೆ ಈ ಬಗ್ಗೆ ಸಂಶಯ ಉಂಟಾಗಿದೆ. ಮತ್ತಷ್ಟು ಆಳವಾಗಿ ತನಿಖೆಗೆ ಇಳಿದಾಗ ಕೊಲೆಯ ಹಿಂದಿನ ಕಾರಣ ತಿಳಿದು ಬಂದಿದೆ. ಶೆಡ್‌ ವೊಂದರಲ್ಲಿ ರೇಣುಕಾ ಸ್ವಾಮಿ ಅವರ ಕೊಲೆಯಾಗಿತ್ತು. ಮೊದಲಿಗೆ ಇದೊಂದು ಆತ್ಮಹತ್ಯೆ ಪ್ರಕರಣವೆನ್ನಲಾಗಿತ್ತು. ಆದರೆ ತನಿಖೆಯ ಬಳಿಕ ಇದೊಂದು ಕೊಲೆ ಎನ್ನುವುದು ಗೊತ್ತಾಗಿದೆ. ಸದ್ಯ ದರ್ಶನ್‌ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here