ಮಂಗಳೂರು (ಬೆಂಗಳೂರು): ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂಬ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲು ವಿಶೇಷ ನ್ಯಾಯಾಲಯ ಆದೇಶಿಸಿದೆ.
ರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ಹದಿನೇಳು ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಯಡಿಯೂರಪ್ಪ ಅವರ ಮೇಲಿದೆ.
ಆರೋಪಿಯು ತುಂಬಾ ಬಲಾಢ್ಯರು. ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಇವರ ಇಬ್ಬರು ಪುತ್ರರಲ್ಲಿ ಒಬ್ಬರು ಹಾಲಿ ಸಂಸದರು ಹಾಗೂ ಮತ್ತೊಬ್ಬರು ಪಕ್ಷವೊಂದರ ರಾಜ್ಯ ಘಟಕದ ಅಧ್ಯಕ್ಷರು. ಇಂತಹವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗುತ್ತಿಲ್ಲ. ಸುಮ್ಮನೆ ಸಮಯ ಕೇಳುತ್ತಿದ್ದಾರೆ. ಹೀಗಾಗಿ ಇವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ನ್ಯಾಯಾಲಯವನ್ನು ಕೋರಿದರು.
ಈ ಕೋರಿಕೆಯನ್ನು ಮಾನ್ಯ ಮಾಡಿದ ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ. ರಮೇಶ್ ಅವರು ಬಂಧನ ವಾರೆಂಟ್ ಹೊರಡಿಸಲು ಆದೇಶಿಸಿದ್ದಾರೆ.