ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್‌ನ ಅಭ್ಯರ್ಥಿ ಆಯ್ಕೆಗೆ ಮತ್ತು ಚುನಾವಣಾ ರಣತಂತ್ರ ರೂಪಿಸಲು ಕೆಪಿಸಿಸಿ ದ.ಕ. ಮತ್ತು ಉಡುಪಿ ಸ್ಥಳೀಯ ಸಂಸ್ಥೆ ಉಪ ಚುನಾವಣೆ ಉಸ್ತುವಾರಿ ಸಮಿತಿ ರಚಿಸಿದೆ.
ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕಾರಣದಿಂದಾಗಿ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.
ಈ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಸ್ತುವಾರಿ ಸಮಿತಿಯನ್ನು ರಚಿಸಿದ್ದಾರೆ. ಪಕ್ಷದ ಸಂಭಾವ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಮತ್ತು ಕಾಂಗ್ರೆಸ್‌ನ ಅಭ್ಯರ್ಥಿಯ ಗೆಲುವಿಗೆ ಅಗತ್ಯವಾದ ಕ್ರಮ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಸ್ಥಳೀಯ ಶಾಸಕರು, ಹಿರಿಯ ಮುಖಂಡರು ಹಾಗೂ ಇತರರೊಂದಿಗೆ ಸಮಾಲೋಚನೆ ನಡೆಸಿ ತಕ್ಷಣ ಕೆಪಿಸಿಸಿಗೆ ವರದಿ ಸಲ್ಲಿಸುವಂತೆ ಡಿಕೆಶಿ ಆದೇಶ ನೀಡಿದ್ದಾರೆ.
ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ರೋಜಿ ಜಾನ್ ಮತ್ತು ಕೆಪಿಸಿಸಿ ಉಸ್ತುವಾರಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ ಸಮಿತಿಯಲ್ಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾರೆ.
ಈ ಸಮಿತಿಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿರುವ ಕಾಂಗ್ರೆಸ್‌ನ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಮತ್ತು ದ.ಕ. ಅಭ್ಯರ್ಥಿಯಾಗಿದ್ದ ಪದ್ಮರಾಜ್ ಆರ್. ಪೂಜಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, 2023ರ ವಿಧಾನ ಸಭೆಯಲ್ಲಿ ಸೋಲನುಭವಿಸಿದ್ದ ಅಭ್ಯರ್ಥಿಗಳಾದ ಉದಯ ಶೆಟ್ಟಿ ಮತ್ತು ಕಿಶನ್ ಹೆಗ್ಡೆ ಸ್ಥಾನ ಪಡೆದಿದ್ದಾರೆ.